ಕೊಚ್ಚಿ ಸ್ಫೋಟದ ಕುರಿತು ಪ್ರಚೋದನಾಕಾರಿ ಹೇಳಿಕೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ 2ನೇ ಪ್ರಕರಣ ದಾಖಲು

Update: 2023-11-02 16:34 GMT

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್( Photo- PTI)

ಹೊಸದಿಲ್ಲಿ: ಕೊಚ್ಚಿಯ ಪ್ರಾರ್ಥನಾ ಮಂದಿರದಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿ ಸಾಮಾಜಿಕ ಮಾದ್ಯಮದ ಪೋಸ್ಟ್‌ಗಳ ಮೂಲಕ ವಿಭಿನ್ನ ಗುಂಪುಗಳ ನಡುವೆ ದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರದ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳ ಪೊಲೀಸರು ಇನ್ನೊಂದು ಪ್ರಕರಣ ದಾಖಲಿಸಿದ್ದಾರೆ.

ಕೆಪಿಸಿಸಿ ಡಿಜಿಟಲ್ ಮೀಡಿಯಾ ಸಂಚಾಲಕ ಪಿ. ಸರಿನ್ ದಾಖಲಿಸಿದ ದೂರಿನ ಆಧಾರದಲ್ಲಿ ಇದೇ ಪ್ರಕರಣದ ಕುರಿತಂತೆ ರಾಜೀವ್ ಚಂದ್ರಶೇಖರ್ ಅವರ ವಿರುದ್ಧ ಎರ್ನಾಕುಳಂ ಕೇಂದ್ರ ಪೊಲೀಸರು ಎರಡನೇ ಪ್ರಕರಣ ದಾಖಲಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳಿಗೆ ಸಂಬಂಧಿಸಿ ಪಿ. ಸರಿನ್ ಅವರು ನೀಡಿದ ದೂರಿನ ಆಧಾರದಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ವಕ್ತಾರ ಅನಿಲ್ ಆ್ಯಂಟನಿ ಅವರ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿದೆ.

ಈ ಎರಡೂ ಪ್ರಕರಣಗಳನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 153, 153ಎ ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120 (0) ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟ ಘಟನೆ ಹಾಗೂ ಹಮಾಸ್ ನಾಯಕನೋರ್ವ ಪ್ರೇಕ್ಷಕರನ್ನು ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾದ ಮಲಪ್ಪುರಂ ಜಿಲ್ಲೆಯಲ್ಲಿ ಸಂಘಟನೆಯೊಂದು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಪೋಸ್ಟ್‌ಗಳ ಕುರಿತಂತೆ ಈ ವಾರದ ಆರಂಭದಲ್ಲಿ ಇದೇ ಸೆಕ್ಷನ್ ಅಡಿಯಲ್ಲಿ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣ ದಾಖಲಿಸಿದ ಕುರಿತಂತೆ ಬಿಜೆಪಿ ಹಾಗೂ ರಾಜೀವ್ ಚಂದ್ರಶೇಖರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕ್ರಮವನ್ನು ಖಂಡಿಸಿರುವ ಬಿಜೆಪಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಮಾಸ್‌ನ ತುಷ್ಠೀಕರಣವನ್ನು ಬಹಿರಂಗಪಡಿಸಿರುವುದಕ್ಕಾಗಿ ಎಫ್‌ಐಆರ್ ದಾಖಲಿಸಿದೆ ಎಂದಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News