ಎನ್ಎಸ್ಎ, 3 ಸೇನಾ ಮುಖ್ಯಸ್ಥರೊಂದಿಗೆ ರಾಜ್ ನಾಥ್ ಸಿಂಗ್ ಸಭೆ

ರಾಜ್ ನಾಥ್ ಸಿಂಗ್ | PC : PTI
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಬುಧವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್, ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಶಲ್ ಎ.ಪಿ. ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರೊಂದಿಗೆ ಸಭೆ ನಡೆಸಿದರು.
ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಭಯೋತ್ಪಾದಕ ದಾಳಿಯ ಬಳಿಕ, ಪಹಲ್ಗಾಮ್, ಜಮ್ಮು ಮತ್ತು ಕಾಶ್ಮೀರ ಹಾಗೂ ಸುತ್ತಲಿನ ಪ್ರದೇಶಗಳ ಭದ್ರತಾ ಪರಿಸ್ಥಿತಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ನೌಕಾಪಡೆ ಮುಖ್ಯಸ್ಥ ದಿನೇಶ್ ತ್ರಿಪಾಠಿ ರಕ್ಷಣಾ ಸಚಿವರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಉನ್ನತ ಅಧಿಕಾರಿಗಳು ಪೀಡಿತ ಪ್ರದೇಶಗಳಿಗೆ ಧಾವಿಸಿದ್ದಾರೆ ಮತ್ತು ಸ್ಥಳೀಯ ಭದ್ರತಾ ಪಡೆಗಳನ್ನು ಎಚ್ಚರದಲ್ಲಿ ಇರಿಸಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಜೊತೆಗೆ, ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಸುವುದಕ್ಕಾಗಿ ಈ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ.
ಭಯೋತ್ಪಾದಕರ ದಾಳಿಯಲ್ಲಿ ಓರ್ವ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ ನರ್ವಾಲ್ ಮೃತಪಟ್ಟಿದ್ದಾರೆ.