ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ; ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವಾಗ ಬಚ್ಚನ್ ಹೆಸರನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ
ಹೊಸದಿಲ್ಲಿ: ಕಳೆದ ತಿಂಗಳು ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ಕೆಳವರ್ಗಗಳನ್ನು ಹೊರಗಿಟ್ಟ ಅದ್ಭುತ ನಿದರ್ಶನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಇತರೆ ಹಿಂದುಳಿದ ವರ್ಗಗಳ ಗೈರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ, ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್ ಹಾಗೂ ಐಶ್ವರ್ಯ ಬಚ್ಚನ್ ಅವರ ಹೆಸರನ್ನು ನಿರ್ಧಿಷ್ಟವಾಗಿ ಉಲ್ಲೇಖಿಸಿದರು. ಗಮನಾರ್ಹ ಸಂಗತಿಯೆಂದರೆ, ಐಶ್ವರ್ಯ ಬಚ್ಚನ್ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.
"ನೀವು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ನೋಡಿದಿರಾ? ಅಲ್ಲೇನಾದರೂ ಹಿಂದುಳಿದ ವರ್ಗಗಳ ಒಬ್ಬರದಾದರೂ ಮುಖವಿತ್ತೆ? ಅಲ್ಲಿ ಅಮಿತಾಭ್ ಬಚ್ಚನ್, ಐಶ್ವರ್ಯ ಬಚ್ಚನ್ ಹಾಗೂ ಮೋದಿ ಮಾತ್ರವಿದ್ದರು" ಎಂದು ರಾಹುಲ್ ಗಾಂಧಿ ಹೇಳಿದರು ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ರವಿವಾರ ಪ್ರಯಾಗ್ ರಾಜ್‌ನಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.
"ದೇಶದ ಜನಸಂಖ್ಯೆಯಲ್ಲಿ ಶೇ. 73ರಷ್ಟಿರುವ ಹಿಂದುಳಿದ ವರ್ಗಗಳ ಜನರು ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕಂಡು ಬರಲಿಲ್ಲ. ಅವರನ್ನು ದೇಶದ ವಾರಸುದಾರರು ಎಂದು ಪರಿಗಣಿಸುವುದು ಬಿಜೆಪಿಗೆ ಎಂದೂ ಬೇಕಿಲ್ಲ" ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಜನವರಿ 22ರಂದು ನಡೆದ ಅಯೋಧ್ಯೆಯಲ್ಲಿನ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್‌ಎಸ್‌ಎಸ್ ಮಖ್ಯಸ್ಥ ಮೋಹನ್ ಭಾಗವತ್‌ರೊಂದಿಗೆ ಸಾವಿರಾರು ಮಂದಿ ಸಿನಿಮಾ ತಾರೆಯರು, ರಾಜಕಾರಣಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಆದರೆ, ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಆ ಕಾರ್ಯಕ್ರಮಕ್ಕೆ ಗೈರಾಗಿದ್ದವು.