ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ತಿರುವನಂತಪುರ : ಡಿಸೆಂಬರ್ 2ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರತ ಹವಾಮಾನ ಇಲಾಖೆ (ಐಎಂಡಿ) ರವಿವಾರ ರೆಡ್ ಅಲರ್ಟ್ ಘೋಷಿಸಿದೆ.
ಉತ್ತರದ ಜಿಲ್ಲೆಗಳಾದ ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಹಾಗೂ ಕಣ್ಣೂರಿನಲ್ಲಿ ಸೋಮವಾರ ಭಾರೀ ಮಳೆ ಸುರಿಯಲಿದೆ. ಆದುದರಿಂದ ಇಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ಹೇಳಿದೆ.
ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಪತ್ತನಂತಿಟ್ಟ, ಆಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ ಎಂದು ಅದು ಹೇಳಿದೆ.
ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ಭೂಕುಸಿತ ಸಂಭವಿಸುವ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರವಾಗಿರುವಂತೆ ಸಲಹೆ ನೀಡಿದೆ. ಅಲ್ಲದೆ, ಅವರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ನಿರ್ದೇಸಿಸಿದೆ.