ಖರ್ಗೆಯನ್ನು ಭೇಟಿಯಾದ ಸಂಜಯ್ ಸಿಂಗ್: ‘ಇಂಡಿಯಾ’ ಮೈತ್ರಿಕೂಟದಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ಆಗ್ರಹ

Update: 2024-04-14 15:23 GMT

ಸಂಜಯ್ ಸಿಂಗ್ ,  ಮಲ್ಲಿಕಾರ್ಜುನ ಖರ್ಗೆ | PC : ANI  

ಹೊಸದಿಲ್ಲಿ: ಆಪ್ ನಾಯಕ ಸಂಜಯ್ ಸಿಂಗ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊಸದಿಲ್ಲಿಯ ಅವರ ನಿವಾಸದಲ್ಲಿ ರವಿವಾರ ಭೇಟಿಯಾಗಿದ್ದಾರೆ. ಅಲ್ಲದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವಂತೆ ಆಗ್ರಹಿಸಿದ್ದಾರೆ.

ತಾನು ಜೈಲಿನಿಂದ ಹೊರಬಂದ ಬಳಿಕ ಖರ್ಗೆ ಅವರ ಬೆಂಬಲ ಕೋರಿದ್ದೇನೆ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಕಾರಾಗೃಹದಲ್ಲಿ ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ಅವರಿಗೆ ತಿಳಿಸಿದ್ದೇನೆ ಎಂದು ಸಿಂಗ್ ಹೇಳಿದರು.

ಖರ್ಗೆ ಅವರು ನಮಗೆ ಬೆಂಬಲ ನೀಡುತ್ತಿದ್ದಾರೆ. ಆದುದರಿಂದ ನಾನು ಜೈಲಿನಿಂದ ಬಿಡುಗಡೆಯಾದ ಬಳಿಕ ಅವರನ್ನು ಭೇಟಿಯಾಗಲು ಬಯಸಿದೆ. ಭೇಟಿಯ ಸಂದರ್ಭ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದೆವು ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಹಾಗೂ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿರಿಸುತ್ತಿರುವ ವಿಷಯದ ಕುರಿತು ನಾವು ಚರ್ಚೆ ನಡೆಸಿದ್ದೇವೆ. ಕಾರಾಗೃಹದಲ್ಲಿ ಕೇಜ್ರಿವಾಲ್ ಅವರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಹಾಗೂ ಅವರ ಹಕ್ಕುಗಳನ್ನು ಹೇಗೆ ಕಸಿದುಕೊಳ್ಳಲಾಗುತ್ತಿದೆ ಎಂದು ಕೂಡ ನಾನು ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.

ಮುಂದಿನ ಲೋಕಸಭಾ ಚುನಾವಣೆಗೆ ಸಾರ್ವಜನಿಕರ ಮುಂದಿರಿಸಲು ‘ಇಂಡಿಯಾ’ ಮೈತ್ರಿಕೂಟ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಹೊಂದಿರಬೇಕು ಎಂಬ ಪ್ರಸ್ತಾವವನ್ನು ನಾನು ಅವರ ಮುಂದಿರಿಸಿದ್ದೇನೆ ಎಂದು ಖರ್ಗೆ ಅವರನ್ನು ಭೇಟಿಯಾದ ಬಳಿಕ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

‘‘ನಾನು ಖರ್ಗೆ ಅವರನ್ನು ಅವರ ನಿವಾಸದಲ್ಲಿ ಬೇಟಿಯಾಗಿದ್ದೇನೆ’’ ಎಂದು ‘ಎಕ್ಸ್’ನ ಪೋಸ್ಟ್ನಲ್ಲಿ ಅವರು ಹೇಳಿದ್ದಾರೆ. ‘ಇಂಡಿಯಾ’ ಮೈತ್ರಿಕೂಟ ಜಂಟಿ ಪ್ರಣಾಳಿಕೆ ಹೊರತರುವುದು, ತನಿಖಾ ಸಂಸ್ಥೆಗಳ ದುರ್ಬಳಕೆ, ಅರವಿಂದ ಕೇಜ್ರಿವಾಲ್ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವುದು, ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಉಂಟಾದ ಬಿಕ್ಕಟ್ಟುಗಳ ಕುರಿತು ನಾವು ಚರ್ಚೆ ನಡೆಸಿದ್ದೇವೆ ಎಂದು ಸಿಂಗ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News