ಜ್ಞಾನವಾಪಿ ಮಸೀದಿ ಪ್ರಕರಣ: ನೆಲಮಾಳಿಗೆಯಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿದ್ದ ಆದೇಶಕ್ಕೆ ತಡೆ ಹೇರಲು ಸುಪ್ರೀಂ ಕೋರ್ಟ್ ನಕಾರ
Update: 2024-04-01 11:03 GMT
ಹೊಸದಿಲ್ಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಕೆಳ ಹಂತದ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ಹೇರಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನೆಲಮಾಳಿಗೆಯಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಿ ಜಿಲ್ಲಾ ನ್ಯಾಯಾಲಯ ಜನವರಿ 31ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಫೆಬ್ರವರಿಯಲ್ಲಿ ವಜಾಗೊಳಿಸಿತ್ತು.
ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪವಿರುವ ಮಸೀದಿ ಆವರಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ 1993ರಲ್ಲಿ ಸಲ್ಲಿಸಿದ್ದ ಆದೇಶವು ಕಾನೂನುಬಾಹಿರ ಎಂದು ನ್ಯಾಯಾಲಯ ಅರ್ಜಿ ವಜಾಗೊಳಿಸುವ ವೇಳೆ ಹೇಳಿತ್ತು.