ಕೋಲ್ಕತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್

Update: 2024-08-18 16:31 GMT

ಹೊಸದಿಲ್ಲಿ: ಕೋಲ್ಕತಾದ ಆರ್.ಜಿ.ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡಿದೆ ಹಾಗೂ ಆಗಸ್ಟ್ 20ರಂದು ಪ್ರಕರಣದ ಆಲಿಕೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಪ್ರಕರಣದ ಆಲಿಕೆ ನಡೆಸಲಿದ್ದಾರೆ. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಹಾಗೂ ಮನೋಜ್ ಮಿಶ್ರಾ ನ್ಯಾಯಪೀಠದಲ್ಲಿರುವ ಇನ್ನಿಬ್ಬರು ಸದಸ್ಯರು.

ಈ ಪ್ರಕರಣದ ಆಲಿಕೆಯನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಕೋರಿ ಹಲವಾರು ಅರ್ಜಿಗಳು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದವು. ಕೋಲ್ಕತಾದ ಕಿರಿಯ ವೈದ್ಯೆಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ‘ಬರ್ಬರತೆ ಹಾಗೂ ಭಯಾನಕತೆ’ಯನ್ನು ಪರಿಗಣನೆಗೆ ತೆಗೆದುಕೊಂಡು ಸರ್ವೋಚ್ಚ ನ್ಯಾಯಾಲವು ಸ್ವಯಂಪ್ರೇರಿತವಾಗಿ ಸೂಕ್ತಕ್ರಮವನ್ನು ಕೈಗೊಳ್ಳಬೇಕೆಂದು ಹಲವಾರು ಅರ್ಜಿದಾರರು ಸುಪ್ರೀಂಕೋರ್ಟನ್ನು ಆಗ್ರಹಿಸಿದ್ದರು.

ಕೋಲ್ಕತಾದ ಪಿ.ಜಿ.ಕರ್ ವೈದ್ಯಕೀಯ ಕಾಲೇಜ್‌ನ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್ 9ರಂದು ಕಿರಿಯ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಪೌರ ಸ್ವಯಂ ಸೇವಕನೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

ಆರೋಪಿಗಳನ್ನು ಸಾಧ್ಯವಾದಷ್ಟು ಶೀಘ್ರದಲ್ಲೇ ಬಂಧಿಸಬೇಕು ಹಾಗೂ ಮರಣೋತ್ತರ ಪರೀಕ್ಷಾ ವರದಿಯನ್ನು ಬಹಿರಂಗಪಡಿಸಬೇಕೆಂದು ಕಿರಿಯ ವೈದ್ಯರು ಆಗ್ರಹಿಸುತ್ತಿದ್ದಾರೆ.

ಈ ಪ್ರಕರಣವು ದೇಶಾದ್ಂತ ವ್ಯಾಪಕ ಪ್ರತಿಭಟನೆಯ ಕಿಚ್ಚನ್ನು ಹೊತ್ತಿಸಿತ್ತು. ವೈದ್ಯಕೀಯ ವೃತ್ತಿಪರರು ಹಾಗೂ ಸಾಮಾಜಿಕ ಸಂಘಟನೆಗಳು ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಹಾಗೂ ಮಹಿಳಾ ಸುರಕ್ಷತೆಗೆ ಸೂಕ್ತಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕೋಲ್ಕತಾ ಪೊಲೀಸರ ಕರ್ತವ್ಯಲೋಪವನ್ನು ತೀವ್ರವಾಗಿ ಖಂಡಿಸಿದ್ದ ಕಲ್ಕತ್ತಾ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News