ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಒದಗಿಸುವಲ್ಲಿ ವಿಳಂಬ | ಕೇಂದ್ರ, ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ಹೊಸದಿಲ್ಲಿ : ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಒದಗಿಸುವಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಸರಿಸುತ್ತಿರುವ ವಿಳಂಬ ನೀತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ’’ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನು ಒಳಗೊಂಡ ಪೀಠ ಇದಕ್ಕೆ ಸಂಬಂಧಿಸಿ ನವೆಂಬರ್ 19ರ ಒಳಗೆ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಂತಿಮ ಅವಕಾಶ ನೀಡಿತು.
‘‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ. ಇನ್ನು ಮುಂದೆ ಸಹನೆಯಿಂದ ಇರಲು ಸಾಧ್ಯವಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ. ನಮ್ಮ ಆದೇಶ ಪಾಲನೆಗೆ ನಿಮಗೆ ಕೊನೆಯ ಅವಕಾಶ ನೀಡುತ್ತಿದ್ದೇವೆ’’ ಎಂದು ಪೀಠ ಹೇಳಿತು.
ಕೇಂದ್ರ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವಯಾ ಭಾಟಿ, ಅಂತ್ಯೋದಯ ಅನ್ನ ಯೋಜನೆ ಅಡಿ ಪ್ರತಿ ಆದ್ಯತಾ ಕುಟುಂಬಕ್ಕೆ ಒಂದು ಪಡಿತರ ಚೀಟಿ ನೀಡಲಾಗುತ್ತದೆ ಎಂದು ಹೇಳಿದರು.
ಕೋವಿಡ್ ಸಂದರ್ಭ ವಲಸೆ ಕಾರ್ಮಿಕರ ಸಮಸ್ಯೆ ಹಾಗೂ ಸಂಕಟಗಳನ್ನು ಗಮನಕ್ಕೆ ತೆಗೆದುಕೊಂಡ ಬಳಿಕ 2020ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಲಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.