ನಿಜಕ್ಕೂ ಕಳವಳಕಾರಿ: ಅಲಹಾಬಾದ್ ಹೈಕೋರ್ಟ್ ಕಾರ್ಯ ವೈಖರಿ ಬಗ್ಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ
ಹೊಸದಿಲ್ಲಿ: ಪ್ರಕರಣಗಳನ್ನು ಪಟ್ಟಿ ಮಾಡುವ ವಿಚಾರಕ್ಕೆ ಬಂದಾಗ ಹೈಕೋರ್ಟ್ ಗಳಲ್ಲಿ ವಿಶೇಷವಾಗಿ ಅಲಹಾಬಾದ್ ಹೈಕೋರ್ಟ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ.
ಆಸ್ತಿ ವಿವಾದಕ್ಕೆ ಸಂಬಂಧಿಸಿದ ತಮ್ಮ ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿಲ್ಲ ಎಂದು ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಈ ಹೇಳಿಕೆಯನ್ನು ನೀಡಿದೆ.
ಈ ಬಗ್ಗೆ ನಾವು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಕೆಲವು ಹೈಕೋರ್ಟ್ ಗಳಲ್ಲಿ ಏನಾಗುತ್ತವೆ ಎಂದು ನಮಗೆ ತಿಳಿದಿಲ್ಲ ಮತ್ತು ಇದು ನಿಜವಾಗಿಯೂ ಚಿಂತಿಸಬೇಕಾದ ವಿಷಯವಾಗಿದೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.
ಈ ವೇಳೆ ಹಿರಿಯ ವಕೀಲ ಕಪಿಲ್ ಸಿಬಲ್, ನಾನು ಕೂಡ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ, ಪರಿಸ್ಥಿತಿ ಬಹಳ ಕೆಟ್ಟದಾಗಿದೆ ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ.
ಅನ್ಸಾರಿ ಕಳೆದ ವರ್ಷ ತಮ್ಮ ಕುಟುಂಬದ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿದಾರರು ಸಲ್ಲಿಸಿದ ಮಧ್ಯಂತರ ತಡೆ ಅರ್ಜಿಯನ್ನು ಸಾಧ್ಯವಾದಷ್ಟು ಬೇಗ ವಿಚಾರಣೆಗೆ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಹೈಕೋರ್ಟ್ ಗೆ ತಿಳಿಸಿದೆ,