DERC ಅಧ್ಯಕ್ಷರಾಗಿ ನ್ಯಾಯಮೂರ್ತಿ ಉಮೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮುಂದೂಡಿದ ಸುಪ್ರೀಂಕೋರ್ಟ್

Update: 2023-07-04 17:09 GMT

Photo: PTI

ಹೊಸದಿಲ್ಲಿ: ದಿಲ್ಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (DERC)ದ ಅಧ್ಯಕ್ಷರಾಗಿ ಅಲಹಾಬಾದ್ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಉಮೇಶ್ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಂದೂಡಿದೆ.

ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಲಾದ ಆಧ್ಯಾದೇಶದ ನಿಯಮಗಳನ್ನು ಪ್ರಶ್ನಿಸಿ ದಿಲ್ಲಿ ಸರಕಾರ ಸಲ್ಲಿಸಿದ ಅರ್ಜಿಯ ಹಿನ್ನಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನು ಒಳಗೊಂಡ ಪೀಠ ಕೇಂದ್ರ ಸರಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಕಚೇರಿಗೆ ನೋಟಿಸು ಜಾರಿ ಮಾಡಿದೆ.

ಈ ಆಧ್ಯಾದೇಶ ನೇಮಕಾತಿಯಲ್ಲಿ ಚುನಾಯಿತ ಸರಕಾರವನ್ನು ನಿಯಂತ್ರಿಸುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ನೀಡುತ್ತದೆ. ಪೀಠ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ. ಅಲ್ಲದೆ, ಈ ಕುರಿತ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ ಹಾಗೂ ಇತರರಿಗೆ ಸೂಚಿಸಿದೆ.

ಸಕ್ಸೇನಾ ಅವರು ಜೂನ್ 21ರಂದು ಉಮೇಶ್ ಕುಮಾರ್ ಅವರನ್ನು ದಿಲ್ಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಸಕ್ಸೇನಾ ಅವರು ಜುಲೈ 3ರಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಮೂರ್ತಿ ಉಮೇಶ್ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಲಹೆ ನೀಡಿದ್ದರು. ಅನಂತರ ವಿದ್ಯುತ್ ಸಚಿವ ಅತಿಶಿ ಅವರ ಅನಾರೋಗ್ಯದ ಕಾರಣದಿಂದ ಈ ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಈ ಡಿಇಆರ್ಸಿ ಅಧ್ಯಕ್ಷರ ನೇಮಕ ದಿಲ್ಲಿ ಸರಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News