ರೈತ ನಾಯಕ ದಲ್ಲೇವಾಲ್‌ಗೆ ವೈದ್ಯಕೀಯ ನೆರವು ನೀಡಬೇಕೆಂಬ ಆದೇಶ ನಿರ್ಲಕ್ಷ್ಯ | ಪಂಜಾಬ್ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಹೊಸದಿಲ್ಲಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜೀತ್ ಸಿಂಗ್ ದಲ್ಲೇವಾಲ್ ಅವರ ಪ್ರಾಣ ಹಾಗೂ ಸುರಕ್ಷೆ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ.
ಅವರಿಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಪಂಜಾಬ್ ಸರಕಾರಕ್ಕೆ ನಿರ್ದೇಶಿಸಿದೆ.
ದಲ್ಲೇವಾಲ್ ಅವರಿಗೆ ವೈದ್ಯಕೀಯ ನೆರವು ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಅನುಸರಿಸದೇ ಇರುವ ಹಿನ್ನೆಲೆಯಲ್ಲಿ ಪಂಜಾಬ್ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಸುಧಾಂಶು ದುಲಿಯಾ ಅವರನ್ನು ಒಳಗೊಂಡ ರಜಾಕಾಲದ ಪೀಠ ಪಂಜಾಬ್ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ.
‘‘ಕಾನೂನು ಸುವ್ಯವಸ್ಥೆಯ ಸಮಸ್ಯೆ ಇದ್ದರೆ, ನೀವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೆಲವರ ಜೀವ ಅಪಾಯದಲ್ಲಿದೆ. ನೀವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ವೈದ್ಯಕೀಯ ನೆರವು ನೀಡಬೇಕು. ಆದರೆ, ನೀವು ಅದನ್ನು ಅನುಸರಿಸುತ್ತಿಲ್ಲ ಎಂಬುದು ನಮ್ಮ ಭಾವನೆ’’ ಎಂದು ಪೀಠ ಹೇಳಿದೆ.
ಈ ಪ್ರಕರಣದ ವಿಚಾರಣೆ ಶನಿವಾರ ಮತ್ತೆ ನಡೆಯಲಿದೆ. ಈ ಸಂದರ್ಭ ಅನುಸರಣಾ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ದಲ್ಲೇವಾಲ್ ಅವರು ನವೆಂಬರ್ 26ರಿಂದ ಖನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮುಷ್ಕರ ನಡೆಸುತ್ತಿದ್ದಾರೆ.