ತೆಲಂಗಾಣ, ಆಂಧ್ರ ಮಳೆಗೆ ತತ್ತರ: 140 ರೈಲುಗಳು ರದ್ದು
ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾನುವಾರ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಸಂಬಂಧಿ ದುರಂತಗಳಲ್ಲಿ ಹಲವು ಮಂದಿ ಮೃತಪಟ್ಟಿದ್ದು, ರಸ್ತೆ ಹಾಗೂ ರೈಲು ಸಂಚಾರಕ್ಕೆ ಧಕ್ಕೆ ಉಂಟಾಗಿದೆ.
ಭಾರಿ ಮಳೆಯ ಕಾರಣದಿಂದ 140 ರೈಲುಗಳ ಸಂಚಾರ ರದ್ದುಪಡಿಸಲಾಗಿದ್ದು, 97 ರೈಲುಗಳನ್ನು ಬೇರೆ ಮಾರ್ಗವಾಗಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕೇಂದ್ರ ರೈಲ್ವೆ ಪ್ರಕಟಿಸಿದೆ. ಉಭಯ ರಾಜ್ಯಗಳ ನದಿಗಳು ತುಂಬಿ ಹರಿಯುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಸ್ಪಂದನೆ ಪಡೆಗಳು ಸಾವಿರಾರು ಮಂದಿಯನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಿವೆ. ಉಭಯ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಸೋಮವಾರ ಕೂಡಾ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪರಿಸ್ಥಿತಿ ಗಂಭೀರತೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಾಧ್ಯವಿರುವ ಎಲ್ಲ ನೆರವನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂಬ ಭರವಸೆ ನೀಡಿದ್ದಾರೆ.
ತೆಲಂಗಾಣದಲ್ಲಿ ಮಳೆ ಸಂಬಂಧಿ ಅನಾಹುತಗಳಿಂದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ರೇವನಾಥ್ ರೆಡ್ಡಿ, ತುರ್ತು ಪರಿಶೀಲನಾ ಸಭೆ ನಡೆಸಿದರು.