13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2025-04-05 17:34 IST
13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

 ಸುಪ್ರೀಂ ಕೋರ್ಟ್ | PC : PTI  

  • whatsapp icon

ಹೊಸದಿಲ್ಲಿ : 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಎಜಿ ಮಸಿಹ್ ಅವರ ಪೀಠ, ಈ ಬಗ್ಗೆ ನಿರ್ದೇಶನಗಳನ್ನು ನೀಡಲು ನಿರಾಕರಿಸಿತು. ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಕಾರದ ವ್ಯಾಪ್ತಿಗೆ ಒಳಪಟ್ಟಿದೆ. ಸಂಸತ್ತಿನಲ್ಲಿ ಕಾನೂನನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಕೋರುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ.

ಅರ್ಜಿಯಲ್ಲಿ ಉಲ್ಲೇಖಿಸಿದ ವಿಷಯಗಳ ಬಗ್ಗೆ ಕೇಂದ್ರ ಸರಕಾರವನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಅನುಮತಿ ನೀಡಿದೆ. ಸಾಮಾಜಿಕ ಮಾಧ್ಯಮಗಳಿಗೆ ಅನಿಯಂತ್ರಿತ ಪ್ರವೇಶಕ್ಕೆ ಅನುಮತಿಯು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಮಕ್ಕಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದರು.

ವಯಸ್ಸಿನ ಪರಿಶೀಲನೆ, ವಿಷಯಗಳಿಗೆ ನಿರ್ಬಂಧ ಸೇರಿದಂತೆ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿಯಂತ್ರಣ ಕ್ರಮಗಳನ್ನು ಸೂಚಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು. ಈ ನಿಯಮಗಳನ್ನು ಅನುಸರಿಸಲು ವಿಫಲವಾದ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಕಟ್ಟುನಿಟ್ಟಾದ ದಂಡವನ್ನು ವಿಧಿಸಬೇಕೆಂದು ಮನವಿಯನ್ನು ಮಾಡಲಾಗಿತ್ತು.

ಇದಲ್ಲದೆ, ಸಾಮಾಜಿಕ ಮಾಧ್ಯಮಗಳ ಬಳಕೆಯ ಅಪಾಯಗಳ ಬಗ್ಗೆ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿ ಡಿಜಿಟಲ್ ಸಾಕ್ಷರತಾ ಅಭಿಯಾನವನ್ನು ಪ್ರಾರಂಭಿಸಲು ಸರಕಾರಕ್ಕೆ ವಿನಂತಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News