ಹೊಸದಿಲ್ಲಿ | ನಕಲಿ ದಾಖಲೆ ನೀಡಿ ಮತದಾರರ ಗುರುತಿನ ಚೀಟಿ ಪಡೆದುಕೊಳ್ಳಲು ಯತ್ನ : ಇಬ್ಬರ ಬಂಧನ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಕಲಿ ದಾಖಲೆಗಳನ್ನು ಬಳಸಿಕೊಂಡು ಮತದಾರರ ಗುರುತಿನ ಚೀಟಿಯನ್ನು ಪಡೆದುಕೊಳ್ಳಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ.
ಚುನಾವಣಾ ನೋಂದಣಿ ಅಧಿಕಾರಿ ಪ್ರೇಮ್ ನಗರ ಪೊಲೀಸ್ ಠಾಣೆಗೆ ಸಲ್ಲಿಸಿದ ದೂರಿನ ಆಧಾರದಲ್ಲಿ ಬಂಧನ ನಡೆದಿದೆ. ಐವರು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಬಳಸಿ ಹೊಸ ವೋಟರ್ ಐಡಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ನಂತರ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 31 ಮತ್ತು ಬಿಎನ್ ಎಸ್ ಕಾಯ್ದೆಯ ಸೆಕ್ಷನ್ 336 (3) ಮತ್ತು 340 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತನಿಖೆಯ ಸಮಯದಲ್ಲಿ, ಅರ್ಜಿಗಳು ಮತ್ತು ಪೂರಕ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ಮೂವರು ಅರ್ಜಿದಾರರ ದಾಖಲೆಗಳು ಅಸಲಿ ಎಂದು ಕಂಡುಬಂದರೆ, ಇಬ್ಬರು ನಕಲಿ ದಾಖಲೆ ನೀಡಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.