ಸಮಾಜವಾದಿ ಪಕ್ಷದ ಜತೆ ಮೈತ್ರಿಗೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡರ ಒಲವು

Update: 2023-12-19 04:13 GMT

Photo: wikipedia.org

ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ. ಜತೆಗೆ ರಾಜ್ಯ ಮತದಾರರಿಗೆ ಜಾತಿ ಗಣತಿಯನ್ನು ಸೂಕ್ತ ಕಾರ್ಯಸೂಚಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ಜತೆಗೆ ನಡೆಸಿದ ಮಾತುಕತೆಯಲ್ಲಿ ರಾಜ್ಯದ ಬಹುತೇಕ ಮುಖಂಡರು ಎಸ್ಪಿ ಜತೆಗೆ ಕಡ್ಡಾಯವಾಗಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬಿಎಸ್ಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದು ಹೆಚ್ಚು ಪ್ರಯೋಜನಕಾರಿ ಎಂದು ಕೆಲ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಕಾಂಗ್ರೆಸ್ ಅಥವಾ ಇತರ ಯಾವುದೇ ಪಕ್ಷಗಳ ಜತೆ ಬಿಎಸ್ಪಿ ಮೈತ್ರಿ ಮಾಡಿಕೊಳ್ಳಲು ಮಾಯಾವತಿ ಒಪ್ಪಿಕೊಳ್ಳುವುದು ಕಷ್ಟಸಾಧ್ಯ ಎನ್ನುವುದನ್ನೂ ಮುಖಂಡರ ಗಮನಕ್ಕೆ ತಂದಿದ್ದಾರೆ.

ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಗೆ ರಾಜ್ಯದಲ್ಲಿ ಉತ್ತಮ ಸಾಧನೆಯ ಇತಿಹಾಸವಿದ್ದು, ಗೌರವಯುತ ಸ್ಥಾನಗಳ ಪಾಲನ್ನು ಕಾಂಗ್ರೆಸ್ ಪಕ್ಷ ಆಗ್ರಹಿಸಬೇಕು ಎಂದು ಪಟ್ಟು ಹಿಡಿದರೆ, ಇತರರು ವಾಸ್ತವತೆಯ ಹಿನ್ನೆಲೆಯಲ್ಲಿ ಸ್ಥಾನ ಹೊಂದಾಣಿಕೆ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ತಳಹಂತದಲ್ಲಿ ಪಕ್ಷದ ಬಲವನ್ನು ಮನಸ್ಸಿನಲ್ಲಿಟ್ಟುಕೊಂಡು ವಸ್ತುನಿಷ್ಠವಾಗಿ ಅಂದಾಜಿಸುವುದು ಅಗತ್ಯ ಎಂದು ಮುಖಂಡರೊಬ್ಬರು ಸ್ಪಷ್ಟಪಡಿಸಿದರು.

ಅಲ್ಪಸಂಖ್ಯಾತರು ಈ ಬಾರಿ ದೃಢವಾಗಿ ಕಾಂಗ್ರೆಸ್ ಪಕ್ಷದ ಜತೆಗಿದ್ದಾರೆ. ಸಮಾಜವಾದಿ ಪಕ್ಷಕ್ಕೂ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು. ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ರಾಜ್ಯದಿಂದ ಸ್ಪರ್ಧಿಸಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ ಅಜಯ್ ರಾಯ್ ಸಲಹೆ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News