ಹಿರಿಯ ಕಾಂಗ್ರೆಸ್ ನಾಯಕ, ಮಧ್ಯಪ್ರದೇಶ ಮಾಜಿ ಸಚಿವ ಆರಿಫ್ ಅಖೀಲ್ ನಿಧನ

Update: 2024-07-29 06:31 GMT

ಆರಿಫ್ ಅಖೀಲ್ (Photo: etvbharat.com)

ಭೋಪಾಲ್: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಚಿವ ಆರಿಫ್ ಅಖೀಲ್ ಸೋಮವಾರ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಆರು ಬಾರಿ ಭೋಪಾಲ್ ಉತ್ತರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದ ಅಖೀಲ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

1990ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಆರಿಫ್ ಅಖೀಲ್, ನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರು 1998, 2003, 2008, 2013 ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಭೋಪಾಲ್ ಉತ್ತರ ವಿಧಾನಸಭಾ ಕ್ಷೇತ್ರದಿಂದ ವಿಜಯಿಯಾಗಿ ಹೊರಹೊಮ್ಮಿದ್ದರು. ಆದರೆ, 1993ರ ವಿಧಾನಸಭಾ ಚುನಾವಣೆಯಲ್ಲಿ ಜನತಾ ದಳ ಬೆಂಬಲಿತ ಅಭ್ಯರ್ಥಿಯೆದುರು ಪರಾಭವಗೊಂಡಿದ್ದರು.

ಆರಿಫ್ ಅಖೀಲ್ ಅವರು ಜನಪ್ರಿಯ ಮುಸ್ಲಿಂ ನಾಯಕರಾಗಿದ್ದರು ಹಾಗೂ ದಿಗ್ವಿಜಯ್ ಸಿಂಗ್ ನೇತೃತ್ವದ (1996-2003) ಹಾಗೂ ಕಮಲ್ ನಾಥ್ ನೇತೃತ್ವದ (2018-2020) ಕಾಂಗ್ರೆಸ್ ಸರಕಾರಗಳಲ್ಲಿ ಸಂಪುಟ ದರ್ಜೆಯ ಸಚಿವರಾಗಿದ್ದರು.

ಆರಿಫ್ ಅಖೀಲ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ದಿಗ್ವಿಜಯ್ ಸಿಂಗ್ ಹಾಗೂ ಕಮಲ್ ನಾಥ್ ಇಬ್ಬರೂ ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News