ಪಶ್ಚಿಮ ಬಂಗಾಳದಲ್ಲಿ ಸಿಎಎ, ಎನ್‌ಆರ್‌ಸಿ ಹಾಗೂ ಸಮಾನ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

Update: 2024-04-11 17:03 IST
ಪಶ್ಚಿಮ ಬಂಗಾಳದಲ್ಲಿ ಸಿಎಎ, ಎನ್‌ಆರ್‌ಸಿ ಹಾಗೂ ಸಮಾನ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ (PTI)

  • whatsapp icon

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಸಮಾನ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಈದುಲ್ ಫಿತ್ರ್ ಅಂಗವಾಗಿ ಏರ್ಪಡಿಲಾಗಿದ್ದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವು ಜನರು ಚುನಾವಣಾ ಸಂದರ್ಭದಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸುತ್ತಾರೆ. ಅಂತಹ ಪಿತೂರಿಗಳಿಗೆ ಬಲಿಯಾಗಬಾರದು ಎಂದು ಮನವಿ ಮಾಡಿದರು.

“ನಾವು ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ, ಸಮಾನ ನಾಗರಿಕ ಸಂಹಿತೆಗಳನ್ನು ಅಂಗೀಕರಿಸುವುದಿಲ್ಲ. ನಾವು ಒಗ್ಗಟ್ಟಾಗಿ ಜೀವಿಸಿದರೆ ಬೇರೆ ಯಾರಿಂದಲೂ ನಮಗೆ ಹಾನಿಯುಂಟು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ ಮಮತಾ ಬ್ಯಾನರ್ಜಿ, ನಮ್ಮ ಹೋರಾಟ ಬಿಜೆಪಿಯ ವಿರುದ್ಧ ಎಂದು ಸ್ಪಷ್ಟಪಡಿಸಿದರು.

“ನಾವು ನಂತರದಲ್ಲಿ ಇಂಡಿಯಾ ಮೈತ್ರಿಕೂಟದ ಕುರಿತು ನಿರ್ಧರಿಸಲಿದ್ದೇವೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬೇರೆ ಯಾವ ಪಕ್ಷಕ್ಕೂ ಮತ ಹೋಗದಂತೆ ಖಾತರಿಪಡಿಸಿ” ಎಂದು ಅವರು ಮನವಿ ಮಾಡಿದರು.

ಕೇಂದ್ರದಲ್ಲಿನ ಬಿಜೆಪಿ ಸರಕಾರವು ವಿರೋಧ ಪಕ್ಷಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದೂ ಅವರು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರೊಂದಿಗೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಕೂಡಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News