ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
ರಾಜಗಢ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಸಾಧ್ಯತೆಯನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಳ್ಳಿ ಹಾಕಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
“ನಾನು ರಾಜ್ಯಸಭಾ ಸದಸ್ಯನಾಗಿದ್ದು, ನನ್ನ ಸದಸ್ಯತ್ವದ ಅವಧಿಯು ಇನ್ನೂ ಎರಡು ವರ್ಷಕ್ಕಿಂತ ಹೆಚ್ಚಿರುವುದರಿಂದ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಗಯೇ ಉದ್ಭವಿಸುವುದಿಲ್ಲ” ಎಂದು ಶನಿವಾರ ರಾಜಗಢದ ಖಿಲ್ಚಿಪುರ್ ಪಟ್ಟಣದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಅವರು ಹೇಳಿದ್ದಾರೆ.
ಗಮನಾರ್ಹ ಸಂಗತಿಯೆಂದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ದಿಗ್ವಿಜಯ್ ಸಿಂಗ್, ಬಿಜೆಪಿಯ ಪ್ರಗ್ಯಾ ಠಾಕೂರ್ ಎದುರು 3.65 ಲಕ್ಷ ಮತಗಳ ಭಾರಿ ಅಂತರದಿಂದ ಪರಾಭವಗೊಂಡಿದ್ದರು.
ಇದಕ್ಕೂ ಮುನ್ನ 1984 ಹಾಗೂ 1991ರಲ್ಲಿ ದಿಗ್ವಿಜಯ್ ಸಿಂಗ್ ರಾಜಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ರಾಜಗಢ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ನಿರ್ಧರಿಸಲಿದೆ ಎಂದೂ ಅವರು ಹೇಳಿದ್ದಾರೆ.
ಮಧ್ಯಪ್ರದೇಶದ 29 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 28 ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿದ್ದರೆ, ಕಾಂಗ್ರೆಸ್ ಕೇವಲ ಒಂದು ಕ್ಷೇತ್ರವನ್ನು ಪ್ರತಿನಿಧಿಸುತ್ತಿದೆ.