ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪತಂಜಲಿಯ ರಾಮದೇವ್, ಅಚಾರ್ಯ ಬಾಲಕೃಷ್ಣಗೆ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚನೆ
ಹೊಸದಿಲ್ಲಿ: ದಾರಿತಪ್ಪಿಸುವಂತಹ ಜಾಹೀರಾತುಗಳನ್ನು ಪ್ರಕಟಿಸಿದ ಪ್ರಕರಣದಲ್ಲಿ ಪತಂಜಲಿ ಸಹ-ಸ್ಥಾಪಕ ರಾಮದೇವ್ ಮತ್ತು ಕಂಪೆನಿಯ ಆಡಳಿತ ನಿರ್ದೇಶಕ ಬಾಲಕೃಷ್ಣ ಇಬ್ಬರಿಗೂ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.
ವಿವಿಧ ಕಾಯಿಲೆಗಳನ್ನು ಗುಣಪಡಿಸುವುದೆಂದು ಹೇಳಿಕೊಂಡು ದಾರಿತಪ್ಪಿಸುವಂತಹ ಜಾಹೀರಾತುಗಳನ್ನು ಪತಂಜಲಿ ಆಯುರ್ವೇದ ಸಂಸ್ಥೆ ಪ್ರಕಟಿಸುವುದನ್ನು ಮುಂದುವರಿಸಿದಾಗ ನ್ಯಾಯಾಲಯ ಈ ಹಿಂದೆ ನ್ಯಾಯಾಂಗ ನಿಂದನೆ ನೋಟಿಸ್ ಅನ್ನು ಸಂಸ್ಥೆಗೆ ಜಾರಿಗೊಳಿಸಿತ್ತು.
ಇಂತಹ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂದು ಪತಂಜಲಿಯ ವಕೀಲರು ಕಳೆದ ನವೆಂಬರ್ ತಿಂಗಳಿನಲ್ಲಿ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಹೊರತಾಗಿಯೂ ಜಾಹೀರಾತು ಪ್ರಕಟಣೆ ಮುಂದುವರಿದಾಗ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು.
ಆದರೆ ಈ ನೋಟಿಸ್‌ಗೆ ಯಾವುದೇ ಉತ್ತರವನ್ನು ನೀಡಲಾಗಿಲ್ಲ ಎಂಬುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮದೇವ್ ಅವರಿಗೆ ಖುದ್ದಾಗಿ ಹಾಜರಾಗುವಂತೆ ಸೂಚನೆ ನೀಡಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪತಂಜಲಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿ ಸಂಸ್ಥೆಯು ಅಲೋಪತಿ ಮತ್ತು ಆಧುನಿಕ ವೈದ್ಯಕೀಯ ಪದ್ಧತಿ ಕುರಿತು ತಪ್ಪು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಿತ್ತಲ್ಲದೆ ಅದರ ವಿರುದ್ಧ ಕ್ರಮಕೈಗೊಳ್ಳುವಂತೆ ಕೇಂದ್ರ, ಜಾಹೀರಾತು ಗುಣಮಟ್ಟ ಮಂಡಳಿ ಹಾಗೂ ಕೇಂದ್ರ ಗ್ರಾಹಕ ರಕ್ಷಣೆ ಪ್ರಾಧಿಕಾರಕ್ಕೆ ಸೂಚಿಸಬೇಕೆಂದು ಕೋರಿತ್ತು.