ಸಂವಿಧಾನದ ಆಶಯಗಳನ್ನು ಜಾರಿಗೆ ತಂದಿಲ್ಲ: ಪ್ರೊ.ಬಿ.ತಿಮ್ಮೇಗೌಡ
ಬೆಂಗಳೂರು, ಜ.26: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ನಾವುಗಳು ಸಂವಿಧಾನವನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದ್ದೇವೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ತಿಮ್ಮೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಂವಿವಿಯ ಜ್ಞಾನಭಾರತಿ ಆವರಣದ ಆಡಳಿತ ಕಚೇರಿ ಮುಂಭಾಗದಲ್ಲಿ ನಡೆದ 67ನೆ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಶಿಕ್ಷಕರಾದ ನಾವು ಸಮಾಜ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತಲೂ ಸಮಾಜಕ್ಕೆ ನಾವು ಏನು ಕೊಟ್ಟಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ರಾಷ್ಟ್ರಮಟ್ಟದ ನಾಯಕರಾಗುವಂತೆ ತಯಾರು ಮಾಡೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯರಾದ ಜಯಕುಮಾರ್ ಸಿಂಹ, ಪ್ರೊ. ಎನ್.ರಂಗಸ್ವಾಮಿ, ಸಂಜೀವರೆಡ್ಡಿ, ಡಾ.ಸುರೇಶ್ ನಾಡಗೌಡರ್, ಡಾ.ಸುಂದರರಾಜ್ ಅರಸು, ಕುಲಸಚಿವರಾದ ಪ್ರೊ.ಕೆ.ಕೆ.ಸೀತಮ್ಮ, ಬ್ರೈಲ್ ಸಂಪನ್ಮೂಲ ಕೇಂದ್ರದ ನಿರ್ದೇಶಕರು, ವಿವೇಕಾನಂದ ಕಲಾ ಕೇಂದ್ರದವರು ಮತ್ತು ಎಲ್ಲ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.