ಎಸ್.ಎಲ್.ಭೈರಪ್ಪ ವಿರುದ್ಧ ದೇವೇಗೌಡ ಪರೋಕ್ಷ ವಾಗ್ದಾಳಿ

Update: 2016-01-26 18:48 GMT

ಬೆಂಗಳೂರು: ಅಹಿಂಸಾ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ ಸಿಕ್ಕಿಲ್ಲ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ನಗರದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ 67ನೆ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಹಿಂಸಾ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಟೀಕೆ ಮಾಡಿರುವ ಸಾಹಿತಿಯ ಹೆಸರನ್ನು ಹೇಳುವುದಿಲ್ಲ. ಅವರ ವಿರುದ್ಧ ಟೀಕೆ ಮಾಡಿ ವಿವಾದ ಮಾಡುವ ಆಸೆಯೂ ನನಗಿಲ್ಲ ಎಂದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಧಾನಿ ಯಾಗದಿರಲು ಗಾಂಧೀಜಿ ಅವರ ಕುತಂತ್ರವೇ ಕಾರಣ ಎಂದು ಟೀಕೆ ಮಾಡಿರುವವರು ತುಂಬಾ ದೊಡ್ಡ ಸಾಹಿತಿಗಳು. ಶಾಂತಿ ಮತ್ತು ಅಂಹಿಸಾತ್ಮಕ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಸಾವಿರಾರು ಮಂದಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಮಹಾತ್ಮ ಗಾಂಧೀಜಿಯ ಹೆಸರನ್ನು ಅಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಪ್ರಯತ್ನಗಳು ಸರಿಯಲ್ಲ. ಯಾವುದೇ ಕಾರಣಕ್ಕೂ ಅವು ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದರು. ರೈತರ ಆತ್ಮಹತ್ಯೆ ದೇಶಕ್ಕೆ ಮಾರಕ: ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ದೇಶಕ್ಕೆ ಮಾರಕವಾಗಲಿದೆ. ದೇಶದೆಲ್ಲೆಡೆ ಸುಮಾರು 10 ಸಾವಿರಕ್ಕೂ ಅಧಿಕ ಹಾಗೂ ರಾಜ್ಯದಲ್ಲಿ ಒಂದು ಸಾವಿರಕ್ಕೂ ಮೇಲ್ಪಟ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಲಾಭ-ನಷ್ಟಗಳ ಬಗ್ಗೆ ಚರ್ಚೆ ಮಾಡುವುದಕ್ಕಿಂತ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ ಗಮನ ಹರಿಸಬೇಕು ಎಂದು ದೇವೇಗೌಡ ಕರೆ ನೀಡಿದರು.

ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿ ಕೊಂಡಿದ್ದು, ಭವಿಷ್ಯದಲ್ಲಿ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂಬ ಬಲವಾದ ವಿಶ್ವಾಸವಿದೆ. ಪಕ್ಷದ ಕಚೇರಿಗಾಗಿ ಕಟ್ಟುತ್ತಿರುವ ಜೆ.ಪಿ.ಭವನದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಜಯಪ್ರಕಾಶ್ ನಾರಾಯಣ್ ಚಳವಳಿಯಲ್ಲಿ ಪಾಲ್ಗೊಂಡಿದ್ದ ಎಲ್ಲರನ್ನೂ ಕಚೇರಿ ಉದ್ಘಾಟನೆಗೆ ಆಹ್ವಾನಿಸುತ್ತೇನೆ ಎಂದು ಅವರು ಹೇಳಿದರು.

ಉಸ್ತುವಾರಿ:

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಲಾಗಿದ್ದು, ಬೀದರ್ ಕ್ಷೇತ್ರಕ್ಕೆ ಮಾಜಿ ಸಚಿವ ಬಂಡೆಪ್ಪಕಾಶೆಂಪೂರ್, ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಬಿ.ಝೆಡ್.ಝಮೀರ್‌ಅಹ್ಮದ್‌ಖಾನ್‌ಗೆ ಉಸ್ತುವಾರಿ ನೀಡಲಾಗಿದೆ ಎಂದು ದೇವೇಗೌಡ ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ಕಾರ್ಯಾಧ್ಯಕ್ಷ ನಾರಾಯಣ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜೆಡಿಎಸ್ ಟಿಕೆಟ್ ಪ್ರಕಟ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬೀದರ್ ಉತ್ತರ-ಮುಹಮ್ಮದ್ ಅಯಾಝ್‌ಖಾನ್, ಹೆಬ್ಬಾಳ-ಇಸ್ಮಾಯೀಲ್ ಶರೀಫ್, ದೇವದುರ್ಗ-ಕರಿಯಮ್ಮ ನಾಯಕ್ ಕಣಕ್ಕಿಳಿಯಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News