ಬೆಂಗಳೂರು;ರಾಜ್ಯದ 15 ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯ

Update: 2016-02-01 15:00 GMT

 
ಬೆಂಗಳೂರು.ಫೆ.1: ರಾಜ್ಯದ 15 ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಅವಧಿ ಇಂದು ಸಂಜೆ ಮುಕ್ತಾಯವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಈ ತಿಂಗಳ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಈ ತಿಂಗಳ 13ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, 23ರಂದು ಮತ ಎಣಿಕೆ ನಿಗದಿಯಾಗಿದೆ.
 ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ ಮತ್ತು ಗದಗ ಜಿಲ್ಲೆಗಳ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ.
 ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯತ್‌ನ ಅವಧಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸದರಿ ತಾಲೂಕು ಪಂಚಾಯತ್ ಹೊರತುಪಡಿಸಿ, ಉಳಿದಂತೆ ಜಿಲ್ಲೆಯ ಇತರ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
 
ಮೊದಲ ಹಂತದ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಯಲಿರುವ ರಾಜ್ಯದ 15 ಜಿಲ್ಲೆಗಳಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯ ಆತುರದಲ್ಲಿದ್ದುದು ಕಂಡು ಬಂದಿತು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಕಾಂಗ್ರೆಸ್‌ನ ಬಿ ಫಾರಂ ಪಡೆದಿದ್ದ ಇಬ್ಬರು ಅಭ್ಯರ್ಥಿಗಳು ಚುನಾವಣಾಧಿಕಾರಿಗಳ ಮುಂದೆ ಪರಸ್ಪರ ಮಾತಿನ ಚಕಮಕಿ ನಡೆಸಿ, ಒಬ್ಬ ಅಭ್ಯರ್ಥಿ ಮತ್ತೊಬ್ಬ ಅಭ್ಯರ್ಥಿಯ ನಾಮಪತ್ರವನ್ನು ಹರಿದುಹಾಕಿದ ಘಟನೆ ಜರುಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಉಂಟಾದ ಗೊಂದಲ ನಿವಾರಣೆಗೆ ಪೋಲಿಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News