ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ: ಕೆ.ಜೆ.ಜಾರ್ಜ್
ಬೆಂಗಳೂರು, ಮಾ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆಗಳ ದುರಸ್ತಿ ಹಾಗೂ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ರವಿವಾರ ಸರ್ವಜ್ಞನಗರ ಕ್ಷೇತ್ರದ ಎಚ್‌ಬಿಆರ್ ವಾರ್ಡ್‌ನಲ್ಲಿ 7.70 ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಆದ್ಯತೆ ನೀಡಿದೆ ಎಂದರು.
ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊ ಳ್ಳಲಾಗಿದೆ. ರಾಜ್ಯ ಸರಕಾರ ಹಾಗೂ ಬಿಬಿಎಂಪಿಯ ಸಹಯೋಗದೊಂದಿಗೆ ನಾಗರಿಕರಿಗೆ ಅತ್ಯುತ್ತಮ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಎಲಿವೇಟೆಡ್ ಕಾರಿಡಾರ್‌ಗಳು, ಸಿಗ್ನಲ್ ಮುಕ್ತ ಕಾರಿಡಾರ್‌ಗಳ ನಿರ್ಮಾಣಕ್ಕೆ ಸರಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ, ನಗರದ ಜನತೆಗೆ ಸಂಚಾರ ದಟ್ಟಣೆಯಿಂದ ಆಗುತ್ತಿರುವ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಾರ್ಜ್ ತಿಳಿಸಿದರು.
ತಾವು ಪ್ರತಿನಿಧಿಸುತ್ತಿರುವ ಸರ್ವಜ್ಞ ನಗರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗಿದೆ. ಕ್ಷೇತ್ರದ ಜನತೆಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಆನಂದ್, ವಾರ್ಡ್ ಅಧ್ಯಕ್ಷ ಪುಲಿಕೇಶಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.