ಕೊಂಬಾರು: ಮತ್ತೆ ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿ

Update: 2016-04-11 13:07 GMT

ಕಡಬ, ಎ.11. ಸುಬ್ರಹ್ಮಣ್ಯ ಅರಣ್ಯ ವಲಯದ ಸುಂಕದಕಟ್ಟೆ ಎಂಬಲ್ಲಿ ಭಾನುವಾರದಂದು ಅರಣ್ಯ ಪ್ರದೇಶಕ್ಕೆ ಬಿದ್ದ ಬೆಂಕಿಯನ್ನು ಮಧ್ಯರಾತ್ರಿಯವರೆಗೆ ನಡೆಸಿದ ಕಾರ್ಯಾಚರಣೆಯ ಮೂಲಕ ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದು, ಸೋಮವಾರ ಬೆಳಗ್ಗೆ ಕಾಡಿನ ಇನ್ನೊಂದು ಪಾರ್ಶ್ವ ಕೊಂಬಾರಿನ ಬಾರ್ಯ ಎಂಬಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಪುತ್ತೂರು ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದರು. ಮಧ್ಯರಾತ್ರಿಯವರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ 6 ತಂಡಗಳನ್ನು ರಚಿಸಿಕೊಂಡು ಬೆಂಕಿಯ ಕೆನ್ನಾಲಗೆಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಬೆಳಗ್ಗಿನ ಜಾವ ರಬ್ಬರ್ ನಿಗಮದ ಕಾರ್ಮಿಕರು ತಮ್ಮ ದೈನಂದಿನ ಕರ್ತವ್ಯಕ್ಕೆ ಹಾಜರಾದ ಸಮಯದಲ್ಲಿ ಬೆಂಕಿ ಹೊತ್ತಿ ಉರಿಯುವುದನ್ನು ಗಮನಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದು, ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು.  ಸ್ಥಳದಲ್ಲಿ ಹಿರಿಯ ಅಧಿಕಾರಿಗಳಾದ ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ ಕೆ,ಟಿ, ಹನುಮಂತಪ್ಪರವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ, ಸುಬ್ರಹ್ಮಣ್ಯ ವಲಯದ ಅರಣ್ಯಾಧಿಕಾರಿ ಎನ್. ಮಂಜುನಾಥ್, ಪಂಜ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಗತ್ಯ ಪರಿಕರಗಳನ್ನು ಸ್ಥಳದಲ್ಲಿರಿಸಿದ್ದು ಯಾವುದೇ ತುರ್ತು ಪರಿಸ್ಥಿತಿಯನ್ನೆದುರಿಸಲು ಸನ್ನದ್ಧರಾಗಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಉಂಟಾದ ಬಗ್ಗೆ ಪ್ರಾಥಮಿಕ ಹಂತದಲ್ಲಿ ಕೇಸು ದಾಖಲಿಸಲಾಗಿದೆ. ಕಿಡಿಗೇಡಿಗಳು ಯಾವ ಉದ್ದೇಶಕ್ಕಾಗಿ ಕಾಡು ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಲಾಗುವುದು. ಅಲ್ಲದೆ ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು.

ಜಗನ್ನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News