ಮೇ 5ರಂದು ಉಳ್ಳಾಲದಲ್ಲಿ ‘ಶಾಂತಿಗಾಗಿ ಪಾದಯಾತ್ರೆ’

Update: 2016-05-03 14:45 GMT

ಮಂಗಳೂರು, ಮೇ 3: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಸಂಭವಿಸುತ್ತಿರುವ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಮುಖಂಡರನ್ನೊಳಗೊಂಡ ಶಾಂತಿ ಸಭೆಯು ಇಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಎಸಿಪಿ ಕಲ್ಯಾಣ್ ಶೆಟ್ಟಿ ನೇತೃತ್ವದಲ್ಲಿ ಉಳ್ಳಾಲ ಠಾಣಾ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸರ್ವಧರ್ಮಗಳ ಮುಖಂಡರು, ಮಸೀದಿ, ದೇವಸ್ಥಾನಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮೇ 5ರಂದು ಸಂಜೆ 4 ಗಂಟೆಗೆ ಪಾದಯಾತ್ರೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಪೊಲೀಸರ ನೇತೃತ್ವದಲ್ಲಿ ನಡೆಯುವ ಈ ಪಾದಯಾತ್ರೆಯಲ್ಲಿ ಸ್ಥಳೀಯ ಸರ್ವ ಧರ್ಮದ ಮುಖಂಡರು, ಸಂಘ-ಸಂಸ್ಥೆ, ನಗರಸಭಾ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಪಾದಯಾತ್ರೆಯು ಅಬ್ಬಕ್ಕ ಸರ್ಕಲ್‌ನಿಂದ ಪ್ರಾರಂಭಗೊಂಡು ಕೋಡಿ, ಕೋಟೆಪುರ, ಕುತ್ತಾರು, ಕಲ್ಲಾಪು ಮಾರ್ಗವಾಗಿ ಹಾದು ತೊಕ್ಕೊಟ್ಟಿನಲ್ಲಿ ಕೊನೆಗೊಳ್ಳಲಿದೆ ಎಂದು ಉಳ್ಳಾಲ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News