ಆಸ್ಕರ್, ಜೈರಾಂ, ರಾಮಮೂರ್ತಿ, ಫಾರೂಕ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

Update: 2016-05-30 18:36 GMT

ಬೆಂಗಳೂರು, ಮೇ 30: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಸ್ಕರ್ ಫೆರ್ನಾಂಡಿಸ್, ಜೈರಾಮ್ ರಮೇಶ್, ಮೂರನೆ ಅಭ್ಯರ್ಥಿಯಾಗಿ ಕೆ.ಸಿ. ರಾಮಮೂರ್ತಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಎಸ್.ಮೂರ್ತಿಯವರ ಕಚೇರಿಗೆ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಆಗಮಿಸಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಹತ್ತು ಮಂದಿ ಶಾಸಕರ ಸಹಿಯೊಂದಿಗೆ ರಾಜ್ಯಸಭೆಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.

ಈ ನಡುವೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಪಕ್ಷದ ಶಾಸಕರೊಂದಿಗೆ ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಸ್ಕರ್ ಫೆರ್ನಾಂಡಿಸ್, ಜೈರಾಮ್ ರಮೇಶ್ ಮತ್ತು ಬಿಜೆಪಿಯ ನಿರ್ಮಲಾ ಸೀತಾರಾಮನ್ ಗೆಲುವು ಬಹುತೇಕ ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿ ಬಿ.ಎಂ.ಫಾರೂಕ್ ಮತ್ತು ಕಾಂಗೆಸ್ಸಿನ ಮೂರನೆ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮೇಲ್ಮನೆ: ವಿಧಾನಸಭೆಯಿಂದ ಮೇಲ್ಮನೆಯ ಏಳು ಸ್ಥಾನಗಳಿಗೆ ಜೂ.10ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವೀಣಾ ಅಚ್ಚಯ್ಯ ಮತ್ತು ರಿಝ್ವೆನ್ ಅರ್ಶದ್ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳಾಗಿ ನಾರಾಯಣ ಸ್ವಾಮಿ ಮತ್ತು ಹೊಸಕೋಟೆ ಮೂಲದ ಉದ್ಯಮಿ ವೆಂಕಟಪತಿ ತಮ್ಮ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಅಲ್ಲಂ ವೀರಭದ್ರಪ್ಪ, ಆರ್.ಬಿ.ತಿಮ್ಮಾಪುರ್ ಹಾಗೂ ಬಿಜೆಪಿಯ ವಿ.ಸೋಮಣ್ಣ ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಜೆಡಿಎಸ್‌ನ ಎರಡನೆ ಅಭ್ಯರ್ಥಿ ವೆಂಕಟಪತಿ ಗೆಲುವಿಗೆ ಬಿಜೆಪಿ ಬೆಂಬಲ ಕೋರುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಸಭೆ ಹಾಗೂ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರರು ಹಾಗೂ ಜೆಡಿಎಸ್ ಭಿನ್ನಮತೀಯ ಶಾಸಕರ ಮತದ ಮೇಲೆ ನಿರ್ಧಾರವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News