ಮತಕ್ಕಾಗಿ ಲಂಚ ಪ್ರಕರಣ : ಶಾಸಕ ಖೂಬಾ ಸೇರಿ ಇತರರ ವಿರುದ್ಧ ಎಫ್‌ಐಆರ್

Update: 2016-06-14 16:34 GMT

ಬೆಂಗಳೂರು, ಜೂ. 14: ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ‘ಮತಕ್ಕಾಗಿ ಲಂಚ’ ಪ್ರಕರಣ ಸಂಬಂಧ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ ಇನ್ನಿತರರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಮಂಗಳವಾರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಈ ಸಂಬಂಧ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ ಇನ್ನಿತರ ಶಾಸಕರ ವಿರುದ್ಧ ಎಫ್‌ಐರ್ ದಾಖಲಿಸಿದ್ದಾರೆಂದು ಗೊತ್ತಾಗಿದೆ.

ಖಾಸಗಿ ಸುದ್ದಿವಾಹಿನಿಯೊಂದು ಕುಟುಕು ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ‘ಮತಕ್ಕಾಗಿ ಲಂಚ’ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಚುನಾವಣಾ ಆಯೋಗ ಮತಕ್ಕಾಗಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಖೂಬಾ ಸೇರಿದಂತೆ ಇನ್ನಿತರ ಶಾಸಕರ ವಿರುದ್ಧ ‘ಭ್ರಷ್ಟಾಚಾರ ನಿಗ್ರಹ ಕಾಯ್ದೆ’ ಅನ್ವಯ ಎಫ್‌ಐಆರ್ ದಾಖಲಿಸಿ ಪ್ರಕರಣ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ಕಾರ್ಯದರ್ಶಿ ಎಸ್.ಮೂರ್ತಿ ಮಂಗಳವಾರ ನ್ಯಾಯವಾದಿಗಳೊಂದಿಗೆ ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ಶಾಸಕ ಮಲ್ಲಿಕಾರ್ಜುನ ಖೂಬಾ ವಿರುದ್ಧ ದೂರು ದಾಖಲಿಸಿದ್ದಾರೆ. ಪರಿಶೀಲನೆ ಬಳಿಕ ಎಫ್‌ಐಆರ್ ದಾಖಲು ಮಾಡಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News