ಸಿದ್ದರಾಮಯ್ಯ ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿ: ಪೂಜಾರಿ

Update: 2016-07-14 17:42 GMT

ಮಂಗಳೂರು, ಜು.14: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರವು ಜನರ ವಿಶ್ವಾಸ ಕಳೆದುಕೊಳ್ಳುವ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷದಲ್ಲಿರುವ ಸಮರ್ಥರಿಗೆ ಸರಕಾರ ನಡೆಸುವ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿ ಸಾಯುವ ಮೊದಲು ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಅದರ ಆಧಾರದಲ್ಲಿ ಎಫ್‌ಐಆರ್ ದಾಖಲಿಸಬೇಕಿತ್ತು ಸಿದ್ದರಾಮಯ್ಯ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದವರಾಗಿದ್ದರೂ ಎಫ್‌ಐಆರ್ ಬಗ್ಗೆ ಸರಿಯಾದ ಜ್ಞಾನ ಇಲ್ಲದವರಂತೆ ವರ್ತಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರ ಹೇಳಿಕೆಯಿಂದ ಸರಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ. ಸಚಿವ ಕೆ.ಜೆ.ಜಾರ್ಜ್‌ರನ್ನು ಸಮರ್ಥಿಸಿಕೊಳ್ಳುತ್ತಾ ಅವರನ್ನು ರಕ್ಷಣೆ ಮಾಡುತ್ತಿರುವ ಕಾರಣದಿಂದ ಸರಕಾರ ಜನರ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ.ಇದೇ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ನೆಲಕಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಹುದು. ಆ ಕಾರಣದಿಂದ ನಾಯಕತ್ವ ಬದಲಾಯಿಸಬೇಕು. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗಮನಹರಿಸಬೇಕು ಎಂದು ಪೂಜಾರಿ ಅಭಿಪ್ರಾಯಿಸಿದರು.

ನ್ಯಾಯಾಂಗ ತನಿಖೆ ಮಾಡಬೇಕಾಗಿತ್ತು

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕಾಗಿತ್ತು. ಆಗ ಸರಕಾರದ ನಡೆಯನ್ನು ನಾನು ಶ್ಲಾಘಿಸುತ್ತಿದ್ದೆ ಎಂದು ಜನಾರ್ದನ ಪೂಜಾರಿ ತಿಳಿಸಿದರು.

ಸುದ್ದಿಗೊಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಅರುಣ್ ಕುವೆಲ್ಲೋ, ಮುಹಮ್ಮದ್ ನವಾಝ್, ಕರುಣಾಕರ ಶೆಟ್ಟಿ, ಕಮಲಾಕ್ಷ ಸಾಲ್ಯಾನ್, ದೀಪಕ್ ಕುಮಾರ್, ಮನಪಾ ಸದಸ್ಯೆ ಅಪ್ಪಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News