ಶ್ರೀ ಮಹಾವೀರ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಕರಾಟೆ ಸ್ಪರ್ಧೆ

Update: 2016-09-01 13:41 GMT

ಮೂಡುಬಿದಿರೆ, ಸೆ.1: ಕ್ರೀಡೆ ಮತ್ತು ಶಿಕ್ಷಣ ಇಂದು ಪ್ರಾಮುಖ್ಯತೆಯನ್ನು ಹೊಂದಿವೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ಕ್ರೀಡೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಉದ್ಯಮಿ ನಾರಾಯಣ ಪಿ.ಎಂ. ಹೇಳಿದರು.

ಅವರು, ಇಲ್ಲಿನ ಶ್ರೀ ಮಹಾವೀರ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ಬಾಲ್‌ಬ್ಯಾಡ್ಮಿಂಟನ್ ಮತ್ತು ಕರಾಟೆ 2016-17 ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಬೇಕಾದಷ್ಟು ಅತ್ಯುತ್ತಮ ಕ್ರೀಡಾಪಟುಗಳಿದ್ದಾರೆ. ಉತ್ತಮ ಕೋಚ್‌ಗಳಿದ್ದಾರೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಕ್ರೀಡಾಪಟುಗಳು ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಳವೆಯಲ್ಲಿಯೇ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ತರಬೇತಿಯನ್ನು ನೀಡಿ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕಾಗಿದೆ ಎಂದು ಹೇಳಿದರು.

ಶಾಸಕ, ಮಾಜಿ ಸಚಿವ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪೌಷ್ಠಿಕಾಂಶದ ಕೊರತೆಯಿಂದಾಗಿ ಕ್ರೀಡಾಪಟುಗಳ ಸಾಧನೆಗೆ ಹಿನ್ನಡೆಯಾಗುತ್ತಿದೆ. ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಬೇಕಾದರೆ ಆರ್ಥಿಕ ಸಹಿತ ಹಲವು ಸಮಸ್ಯೆಗಳನ್ನು ಎದುರಿಸಿರುತ್ತಾರೆ. ಆದರೆ, ಅವರು ಸಾಧನೆಗಳನ್ನು ಮಾಡಿದ ನಂತರ ಸರಕಾರಗಳು ಗುರುತಿಸಿ ಗೌರವಿಸುತ್ತದೆ ಹೊರತು ಅದಕ್ಕಿಂತ ಮೊದಲು ಗುರುತಿಸಿ ಪ್ರೋತ್ಸಾಹಿಸುವುದಿಲ್ಲವೆಂದು ವಿಷಾದ ವ್ಯಕ್ತಪಡಿಸಿದ ಅವರು, ಈ ಬಾರಿ ಉಜಿರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಕ್ರೀಡಾ ಇಲಾಖೆಯಿಂದ ಸಹಾಯಧನ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಆರ್.ತಿಮ್ಮಯ್ಯ, ಶೋರಿನ್-ರಿಯೂ ಕರಾಟೆ ಅಸೋಸಿಯೇಶನ್‌ನ ಮುಖ್ಯ ಅಧೀಕ್ಷಕ ಮುಹಮ್ಮದ್ ನದೀಂ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ಶಶಿಧರ್ ಮಾಣಿ, ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ದೀಕ್ಷಿತ್, ದೈ.ಶಿ.ಶಿ. ಸಂಘದ ಅಧ್ಯಕ್ಷ ಆಲ್ವೀನ್ ಮಿರಾಂದ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಸ್ಟರ್, ಕ್ರೀಡಾ ಕಾರ್ಯದರ್ಶಿ ಅಖಿಲೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪ.ಪೂ ಕಾಲೇಜಿನ ಪ್ರಾಂಶುಪಾಲ ರಮೇಶ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಗೌತಮಿ ಕಾರ್ಯಕ್ರಮ ನಿರೂಪಿಸಿದರು. ದೈ.ಶಿ. ಉಪನ್ಯಾಸಕ ರಾಜ್ ಪ್ರಸಾದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News