ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಬೆಂಗಳೂರು, ಮಾ. 3: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇತನದಲ್ಲಿ ಆಗಿರುವ ತಾರತಮ್ಯ ನಿವಾರಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಕಟಿಸಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಪದಾಧಿಕಾರಿಗಳ ಸಭೆ ನಡೆಸಿದರು.
ಆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸರಕಾರಿ ನೌಕರರ ವೇತನ ತಾರತಮ್ಯ ನಿವಾರಿಸಲು 7ನೆ ವೇತನ ಆಯೋಗ ರಚನೆಯಾಗಲಿದೆ. ಆಯೋಗ ನೀಡುವ ವರದಿ ಆಧಾರದ ಮೇಲೆ ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಎಲ್ಲ ನೌಕರರ ವೇತನ ತಾರತಮ್ಯ ನಿವಾರಿಸುವ ಸರಕಾರ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದರು.
ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ತಾರತಮ್ಯ ವಿಚಾರವನ್ನೂ ರಚನೆಯಾಗಲಿರುವ ವೇತನ ಆಯೋಗದ ವಿಷಯ ಸೂಚಿಯಲ್ಲಿ ಸೇರಿಸಲಾಗುವುದು ಎಂದ ಅವರು, ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳು ಹಾಗೂ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಬಳಿಕ ಬೇಡಿಕೆಗಳ ಕುರಿತು ಪದಾಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.
ಮೌಲ್ಯಮಾಪನ ಸಮೀಪಿಸುವ ಸಂದರ್ಭದಲ್ಲಿ ಉಪನ್ಯಾಸಕರು ಮತ್ತು ಶಿಕ್ಷಕರು ಬಹಿಷ್ಕಾರದ ಮಾತು ಹೇಳುವುದು ಬೇಡ. ಬೇಡಿಕೆ ಈಡೇರಿಸಲು ಮತ್ತು ಚರ್ಚೆಗೆ ಸರಕಾರ ಸದಾ ಸಿದ್ಧವಿದೆ ಎಂದ ಅವರು, ಮೌಲ್ಯಮಾಪನದ ವೇಳೆ ಸರಕಾರದ ಮೇಲೆ ಒತ್ತಡ ಹೇರುವುದು ಮತ್ತು ಚಳವಳಿಗೆ ಇಳಿಯುವುದು ಸಲ್ಲ. ಸಮಾಜ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ಮುಷ್ಕರಕ್ಕೆ ಮುಂಾಗಬೇಡಿ ಎಂದು ಮನವಿ ಮಾಡಿದರು.
ಏಳನೆ ವೇತನ ಆಯೋಗ ರಚಿಸಿಸುವ ಸಂದರ್ಭದಲ್ಲಿ ವೇತನ ತಾರತಮ್ಯ ಸಂಬಂಧ ಶಿಕ್ಷಕರು ಮತ್ತು ಉಪನ್ಯಾಸಕರ ಅಹವಾಲು ಆಲಿಸುವಂತೆಯೂ ಸೂಚಿಸಲಾಗುವುದು ಎಂದ ಸಿದ್ದರಾಮಯ್ಯ, ಶಿಕ್ಷಕರು ಮತ್ತು ಉಪನ್ಯಾಸಕರ ಎಲ್ಲ ಬೇಡಿಕೆಗಳಿಗೂ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್, ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.
‘ಉಪನ್ಯಾಸಕರ ವೇತನ ಹೆಚ್ಚಳ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟು ನಾಳೆ ನಗರದ ಗಾಂಧಿ ಪುತ್ಥಳಿ ಬಳಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಆದರೆ, ಪರೀಕ್ಷೆಗೆ ಯಾವುದೇ ಅಡ್ಡಿಪಡಿಸುವುದಿಲ್ಲ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪರೀಕ್ಷಾ ಕೊಠಡಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದೇವೆ’
-ತಿಮ್ಮಯ್ಯ ಪುರ್ಲೆ ಉಪನ್ಯಾಸಕರ ಸಂಘದ ಅಧ್ಯಕ್ಷ