ದ್ವಿತೀಯ ಪಿಯು ಪಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ತನ್ವೀರ್ ಸೇಠ್

Update: 2017-03-13 14:12 GMT

ಬೆಂಗಳೂರು, ಮಾ.13: ದ್ವಿತೀಯ ಪಿಯು ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಪರೀಕ್ಷೆ ಪ್ರಾರಂಭವಾದ ನಂತರ ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡಿದ್ದರಿಂದ ಅಕ್ರಮವೆಂದು ಪರಿಗಣಿಸಲಾಗಿದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಪ್ರಾರಂಭವಾಗಿ 30ನಿಮಿಷದ ನಂತರ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್‌ನಲ್ಲಿ ಫೋಟೋ ಹಿಡಿದು ವಾಟ್ಸಾಪ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಹರಿಬಿಟ್ಟಿದ್ದಾನೆ. ಹೀಗಾಗಿ ಇದನ್ನು ಪರೀಕ್ಷಾ ಅಕ್ರಮವೆಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು.

 ಈ ಸಂಬಂಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡದೆ ನಿರಾತಂಕವಾಗಿ ಪರೀಕ್ಷೆಗಳನ್ನು ಬರೆಯಬೇಕು. ಮುಂದಿನ ದಿನಗಳಲ್ಲಿ ಇಂತಹ ತಪ್ಪುಗಳು ನಡೆಯದಂತೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಪರೀಕೆ ಮುಗಿಯುವವರೆಗೂ ಪರೀಕ್ಷಾ ಮೇಲ್ವಿಚಾರಕರಿಗೆ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ ಪರೀಕ್ಷಾ ಅವಧಿ ಮುಗಿಯುವವರೆಗೂ ಪ್ರಶ್ನೆ ಪತ್ರಿಕೆಯನ್ನು ಹೊರಗಡೆ ತೆಗೆದುಕೊಂಡು ಹೋಗುವಹಾಗಿಲ್ಲ. ಒಂದು ವೇಳೆ ಪರೀಕ್ಷೆಯಲ್ಲಿ ಅಕ್ರಮಗಳು ನಡೆದರೆ ಪರೀಕ್ಷಾ ಅಧೀಕ್ಷಕರನ್ನೇ ನೇರೆ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ತನ್ವೀರ್ ಸೇಠ್ ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News