ನೀರಿನ ಸಮಸ್ಯೆಗಿಂತ ಬಿಜೆಪಿಗೆ ಉಪಚುನಾವಣೆ ಮುಖ್ಯ: ಕುಮಾರಸ್ವಾಮಿ ಟೀಕೆ

Update: 2017-04-02 14:19 GMT

ಬೆಂಗಳೂರು, ಎ. 2: ಕಾವೇರಿ ನದಿ ನೀರಿನ ಸಮಸ್ಯೆ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದ ಬಿಜೆಪಿ ಸಂಸದರು, ಉಪಚುನಾವಣೆ ಗೆಲ್ಲುವ ತುಡಿತದಲ್ಲಿದ್ದಾರೆ. ಹೀಗಾಗಿ ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಹೊಡೆತ ಬೀಳುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಸಂಕಷ್ಟ ಪರಿಸ್ಥಿತಿಯ ಬಗ್ಗೆ ಬಿಜೆಪಿ ಸಂಸದರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ನಾಯಕರಿಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಶೀಘ್ರ ಚುನಾವಣೆ:

ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ರಾಜ್ಯದಲ್ಲೂ ಚುನಾವಣೆ ನಡೆದರೆ, ಆಶ್ಚರ್ಯವಿಲ್ಲ ಎಂದು ಭವಿಷ್ಯ ನುಡಿದ ಕುಮಾರಸ್ವಾಮಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ, ರೈತರ ಸಾಲಮನ್ನಾ ಸೇರಿದಂತೆ, ಅಭಿವೃದ್ಧಿಪರ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶವಿದೆ. ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಟ 40 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಮನಸ್ಸಿಲ್ಲ. ಆದರೆ, ರಾಜ್ಯದಲ್ಲಿ ಈ ವರ್ಷವೂ ಮಳೆಯಾಗದಿದ್ದರೆ, ನವೆಂಬರ್, ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವುದು ಬಹುತೇಕ ಖಚಿತ ಎಂದು ಅವರು ಭವಿಷ್ಯ ನುಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರೈತರ ಕಣ್ಣೊರೆಸಲು ಸಾಲಮನ್ನಾದ ನಾಟಕ ಆಡುತ್ತಿದ್ದಾರೆ. ಅವರು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆಯೂ ಜನ ಭ್ರಮನಿರಸನಗೊಂಡಿದ್ದು, ಜನರಿಗೆ ಅನುಕೂಲ ಮಾಡಿಕೊಡುವ ಪಕ್ಷ ಜೆಡಿಎಸ್ ಎನ್ನುವ ಭಾವನೆ ಮೂಡಿದೆ.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಪ್ರಧಾನಿ ಮೋದಿ ಕೇವಲ ಭಾಷಣದ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅದು ಹೆಚ್ಚು ದಿನ ನಡೆಯುವುದಿಲ್ಲ. ಅವರ ನಿಜಬಣ್ಣ ಶೀಘ್ರದಲ್ಲೇ ಜನರಿಗೆ ಗೊತ್ತಾಗಲಿದೆ ಎಂದು ಕುಮಾರಸ್ವಾಮಿ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News