ಒಂದೇ ಸಮುದಾಯದ ಆರು ಜನ ನ್ಯಾಯಮೂರ್ತಿಗಳ ನೇಮಕ ವಿಚಾರ: ಅರ್ಜಿ ವಿಚಾರಣೆ ಬೇರೊಂದು ಪೀಠಕ್ಕೆ ವರ್ಗಾಯಿಸಿದ ಹೈಕೋರ್ಟ್
ಬೆಂಗಳೂರು, ಎ.12: ಕರ್ನಾಟಕ ಹೈಕೋರ್ಟ್ ಕೊಲಿಜಿಯಂ ಒಂದೇ ಸಮುದಾಯಕ್ಕೆ ಸೇರಿದ ಆರು ಜನರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರಿದ್ದ ವಿಭಾಗೀಯ ಪೀಠ ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದೆ.
ಈ ಸಂಬಂಧ ವಕೀಲ ಎನ್.ಪಿ.ಅಮೃತೇಶ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ ಹಾಗೂ ನ್ಯಾ.ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಿ ಆದೇಶಿಸಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಭಾಕರ್ ಅವರು, ಕರ್ನಾಟಕ ಹೈಕೋರ್ಟ್ ಕೊಲಿಜಿಯಂ ಒಂದೇ ಸಮುದಾಯಕ್ಕೆ ಸೇರಿದ ಆರು ಜನರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಆದರೆ, ಈ ನೇಮಕದ ಶಿಫಾರಸ್ಸಿನಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಹೀಗಾಗಿ, ಈ ಅರ್ಜಿಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.