ಯಡಿಯೂರಪ್ಪರ ಭ್ರಷ್ಟಾಚಾರವನ್ನು ಜನತೆ ಮರೆತಿಲ್ಲ: ರಾಮಲಿಂಗಾರೆಡ್ಡಿ
ಬೆಂಗಳೂರು, ಎ.13: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆಸಿದ ಭ್ರಷ್ಟಾಚಾರವನ್ನು ಜನತೆ ಮರೆತಿಲ್ಲ ಎಂಬುದಕ್ಕೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿರುವುದೇ ಸಾಕ್ಷಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಗುರುವಾರ ನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಬಿಜೆಪಿ ಮೇಲೆ ಯಾವುದೇ ರೀತಿಯ ವಿಶ್ವಾಸವಿಲ್ಲವೆಂದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರ ಬ್ಯಾಂಕ್ ಅಕೌಂಟ್‌ಗೆ 15 ಲಕ್ಷ ರೂ.ಹಾಕುತ್ತೇನೆ ಎಂಬ ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಜನತೆಯ ಮತಗಳನ್ನು ಕಸಿದಿದ್ದರು. ಆದರೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಯಾವ ಆಶ್ವಾಸನೆಯನ್ನು ಈಡೇರಿಸಿಲ್ಲ. ಇವೆಲ್ಲವುಗಳ ಬಗ್ಗೆ ಜನತೆಗೆ ಅರಿವಿದ್ದ ಕಾರಣ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್‌ನ ಕೈ ಹಿಡಿದಿದ್ದಾರೆ ಎಂದು ಅವರು ಹೇಳಿದರು.
ಗೀತಾ ಮಹಾದೇವ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರವಾಗಿದೆ. ಅವರಿಗೆ ಸಚಿವ ಸ್ಥಾನ ನೀಡಿದರೆ ತಪ್ಪೇನು ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮುಂದಕ್ಕೂ ಸಿದ್ದರಾಮಯ್ಯರೇ ಸಿಎಂ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಪ್ರಚಾರಕ್ಕೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆ ತಡೆಯಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭೂತಪೂರ್ವಕವಾಗಿ ಗೆದ್ದು, ಸಿದ್ದರಾಮಯ್ಯನವರೇ ಮುಂದಿನ ಬಾರಿಯೂ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.
-ರಾಮಲಿಂಗಾರೆಡ್ಡಿ ಸಾರಿಗೆ ಸಚಿವ