ಉಪಚುನಾವಣೆ ಗೆಲುವಿಗೆ ಬೀಗುವ ಅಗತ್ಯವಿಲ್ಲ; ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ:ಡಾ.ಪರಮೇಶ್ವರ್
ಬೆಂಗಳೂರು, ಎ. 17: ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಬೀಗುವ ಅಗತ್ಯವಿಲ್ಲ. ಬದಲಿಗೆ 2018ರ ಚುನಾವಣೆಗೆ ಸಿದ್ಧರಾಗಬೇಕಿದ್ದು, ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಜನತೆ ತಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಗೂ ಈಗಿನಿಂದಲೇ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ದೇಶ ಕಟ್ಟುವ ಸಾಮರ್ಥ್ಯವುಳ್ಳ ಅನೇಕ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವರಿಷ್ಟರಿಗೆ ಬಿಟ್ಟದ್ದು. ಆದರೆ, ಹೈಕಮಾಂಡ್ ಹೆಚ್ಚಿನ ಜವಾಬ್ದಾರಿ ನಿರ್ವಹಿಸುವಂತೆ ಸೂಚನೆ ನೀಡಿದೆ ಎಂದು ಪರಮೇಶ್ವರ್ ಇದೇ ವೇಳೆ ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಯ ಪ್ರತಿಷ್ಠೆಗಿಂತ ಪಕ್ಷದ ಪ್ರತಿಷ್ಠೆ ಬಹಳ ಮುಖ್ಯ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಮಂದಿ ನಾಯಕರು ಕೆಪಿಸಿಸಿ ಅಧ್ಯಕ್ಷರಾಗಲು ಸಮರ್ಥರಿದ್ದಾರೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.
ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ತಾನೂ ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಪಕ್ಷ ಸದೃಢವಾಗಿದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಿದ್ದೇವೆ. ಮತ್ತಷ್ಟು ಬಲಿಷ್ಠವಾಗಿ ಪಕ್ಷ ಸಂಘಟನೆಗೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.