ವಿಶ್ವನಾಥ್ ಸೇರ್ಪಡೆಗೆ ಜೆಡಿಎಸ್ ಬಾಗಿಲು ತೆರೆದಿದೆ: ರಾಜ್ಯಾಧ್ಯಕ್ಷ ಕುಮಾರಸ್ವಾಮಿ
ಬೆಂಗಳೂರು, ಮೇ 1: ಮಾಜಿ ಸಂಸದ ಎಚ್.ವಿಶ್ವನಾಥ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಜೆಡಿಎಸ್ ಬಾಗಿಲು ತೆರೆದಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಪಕ್ಷ ಸಿದ್ಧ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ಇಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ವಿಶ್ವನಾಥ್ ಪಕ್ಷಕ್ಕೆ ಸೇರ್ಪಡೆ ವಿಚಾರ ಇನ್ನೂ ಪ್ರಗತಿಯಲ್ಲಿದೆ. ಅವರು ಯಾರ ಒತ್ತಡಕ್ಕೂ ಮಣಿಯುವವರಲ್ಲ. ಅವರು ಕೇಳುವ ಕ್ಷೇತ್ರಕ್ಕೆ ಟಿಕೆಟ್ ನೀಡುವ ಬಗ್ಗೆ ಇನ್ನೂ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜಕೀಯ ಕ್ಷೇತ್ರದಲ್ಲಿ ಯಾರೊಬ್ಬರೂ ಸನ್ಯಾಸಿಗಳಲ್ಲ. ವಿಶ್ವನಾಥ್ ಅವರು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾದರೆ ಅವರನ್ನು ಸರಿಯಾಗಿ ನಡೆಸಿಕೊಳ್ಳಲಾಗುವುದು. ಅಲ್ಲದೆ, ಅವರ ಭವಿಷ್ಯದ ರಾಜಕೀಯದ ದೃಷ್ಟಿಯಿಂದ ಸೂಕ್ತ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಸಿಎಂ ಕಚೇರಿಯಿಂದ ಹೊಂದಾಣಿಕೆ ಸುದ್ದಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸಂಬಂಧ ಸಿಎಂ ಕಚೇರಿಯಿಂದ ಸುದ್ದಿ ಹಬ್ಬಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ಹೇಳಿ ಈ ರೀತಿ ಬರೆಸಲಾಗುತ್ತಿದೆ. ನಾವೇನು ಗುಲಾಮರಾ?, ನಮ್ಮ ಪಕ್ಷವನ್ನು ಕಾಂಗ್ರೆಸ್‌ಗೆ ಅಥವಾ ಸಿಎಂಗೆ ಬರೆದುಕೊಟ್ಟಿದ್ದೇವೆಯೇ ಎಂದು ಪ್ರಶ್ನಿಸಿದರು.