ಸರಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

Update: 2017-07-07 14:02 GMT

ಬೆಂಗಳೂರು, ಜು. 7: ಸರಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿದರೆ ಮಾತ್ರ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಇಂದಿಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಇಲ್ಲಿನ ಜಕ್ಕೂರು ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳ ಡೊನೇಷನ್ ಹಾವಳಿಯಿಂದ ಬಡ ಮಕ್ಕಳು ವಿದ್ಯಾಭ್ಯಾಸ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸರಕಾರಿ ಶಾಲೆಗಳ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಕಟ್ಟಡ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ನೆರವು ನೀಡಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಮೌಲ್ಯಯುತ ಶಿಕ್ಷಣಕ್ಕೆ ಆದ್ಯತೆ: ಸರಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ರಾಜ್ಯ ಸರಕಾರ ಕ್ರಮ ವಹಿಸಿದೆ. ಶಿಕ್ಷಕರು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಭವಿಷ್ಯದ ಪ್ರಜೆಗಳನ್ನು ರೂಪಿಸಬೇಕು ಎಂದು ಮೇಲ್ಮನೆ ಸದಸ್ಯ ನಾರಾಯಣಸ್ವಾಮಿ ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಮಂಜುನಾಥ್, ರಾಜ್ಯ ಬೀಜ ನಿಗಮದ ನಿರ್ದೇಶಕ ರವಿಕುಮಾರ್, ರವಿಗೌಡ, ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News