ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ವಜಾ: ಸೆ.11ರಂದು ದಲಿತ್ ಸೇವಾ ಸಮಿತಿ ಪ್ರತಿಭಟನೆ

Update: 2017-09-07 12:48 GMT

ಪುತ್ತೂರು, ಸೆ. 7: ಪುತ್ತೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ದಲಿತ ಮಹಿಳಾ ಸಿಬ್ಬಂದಿಗಳನ್ನು ವಜಾಗೊಳಿಸಿ ಬೇರೆಯವನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಸೆ.11 ರಂದು ದ.ಕ.  ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಪುತ್ತೂರಿನ ಹಿಂದುಳಿದ ವರ್ಗಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ.

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಪ್ಪಿನಂಗಡಿಯ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸಗಾರರಾಗಿದ್ದ ಕೊಕ್ಕಡ ನಿವಾಸಿ ಯಮುನಾ ಮತ್ತು ಹಿಂದುಳಿದ ವರ್ಗಗಳ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ನಿಡ್ಪಳ್ಳಿ ನಿವಾಸಿ ಬೇಬಿ ಅವರನ್ನು ಒಂದು ವರ್ಷಗಳ ಕಾಲ ದುಡಿಸಿ ಅವರ ಮೇಲೆ ಯಾವುದೇ ಆರೋಪಗಳಿಲ್ಲದಿದ್ದರೂ ಅವರನ್ನು ಕೆಲಸದಿಂದ ವಜಾ ಮಾಡಲಾಗಿದ್ದು, ಈ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಮಾಹಿತಿ ಕೇಳಿದ್ದರೂ ಅಧಿಕಾರಿಗಳು ಯಾವುದೇ ಸ್ಪಷ್ಟ ಮಾಹಿತಿ ನೀಡದೆ ಗುತ್ತಿಗೆದಾರ ಸಂಸ್ಥೆಯವರು ಬಿಡುವಂತೆ ಸೂಚಿಸಿದ್ದಾರೆ ಎಂದು ಉತ್ತರಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿದ ಅವರು ಅಧಿಕಾರಿಗಳ ಈ ಧೋರಣೆಯನ್ನೂ ಖಂಡಿಸಿ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಹಾಗೂ ಗುತ್ತಿಗೆದಾರರಾಗಿರುವ ಇವರಿಬ್ಬರೂ ಸೇರಿದಂತೆ ಎಲ್ಲಾ ಶ್ರಮಿಕ ವರ್ಗಗಳ ಪರವಾಗಿ ನ್ಯಾಯಕ್ಕಾಗಿ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜಾ ಹೊಸ್ಮಠ ಮತ್ತು ಗೌರವ ಅಧ್ಯಕ್ಷ ವಾಮನ ನಾಯ್ಕ, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯಮುನಾ ಮತ್ತು ಬೇಬಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News