ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ ಮೃತ್ಯು: ಭಟ್ಕಳದಲ್ಲಿ ಅಘೋಷಿತ ಬಂದ್ ವಾತಾವರಣ

Update: 2017-09-16 08:27 GMT

ಭಟ್ಕಳ, ಸೆ.16 ಪುರಸಭೆಯಿಂದ ನಡೆದ ಅಂಗಡಿಗಳ ತೆರವು ಕಾರ್ಯಾಚರಣೆ ಸಂದರ್ಭ ಉದ್ವೇಗಕ್ಕೊಳಗಾಗಿ ಎರಡು ದಿನಗಳ ಹಿಂದೆ ಪುರಸಭೆ ಕಟ್ಟಡದೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಆಸರಕೇರಿಯ ರಾಮಚಂದ್ರಪ್ಪ ನಾಯ್ಕ ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಭಟ್ಕಳ ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪುರಸಭೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತ ಘಟನೆಯ ಗಂಭಿರತೆಯನ್ನು ಪರಿಗಣಿಸಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದು, ಬೇರೆ ಜಿಲ್ಲೆಗಳಿಂದಲೂ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ರಾಮಚಂದ್ರ ನಾಯ್ಕ ರ ಮೃತದೇಹವನ್ನು ಬೆಳಿಗ್ಗೆ 9 ಗಂಟೆಗೆ ಭಟ್ಕಳ ತರಲಾಗಿದ್ದು, ಆಸರಕೇರಿಯ ಅವರ ನಿವಾಸದ ಮುಂದೆ ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮೃತದೇಹದ ಅಂತ್ಯಸಂಸ್ಕಾರ ಬಳಿಕ ನೆರವೇರಿತು. 

ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಪರಿಸ್ಥಿತಿ ಶಾಂತವಾಗಿದೆ. ಪರಿಸ್ಥಿಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ. ಭಟ್ಕಳದಲ್ಲಿ ಮೊಕ್ಕಂ ಹೂಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಭಯಪಡುವ ಅವಶ್ಯಕತೆಯಿಲ್ಲ. ಇಲ್ಲಿ ಪರಿಸ್ಥಿತಿ ತಿಳಿಯಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News