ದಸರಾ ಮಹೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಆಯುಕ್ತ ಸುಬ್ರಮಣ್ಯೇಶ್ವರ ರಾವ್

Update: 2017-09-20 06:41 GMT

ಮೈಸೂರು, ಸೆ.19: ಪ್ರತೀ ವರ್ಷದಂತೆ ಈ ವರ್ಷವೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‍ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೆ. 21ರಿಂದ 30ರವರೆಗೆ ದಸರಾ ಮಹೋತ್ಸವ ನಡೆಯಲಿದ್ದು, ನಗರದ ವಿವಿಧೆಡೆ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಅಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. 

ಭದ್ರತೆಗಾಗಿ 5056 ಸಿವಿಲ್, ಟ್ರಾಫಿಕ್ ಪೊಲೀಸರು, ಮೈಸೂರು ನಗರ ಕಮಾಂಡೋ ಪಡೆಯ 70 ಕಮಾಂಡೋಗಳು, 60 ಕೆಎಸ್‍ಆರ್‍ಪಿ, ಸಿಎಆರ್, ಡಿಎಆರ್ ತುಕಡಿ, 49 ಭದ್ರತಾ ತಪಾಸಣಾ ಪಡೆಗಳು ಹಾಗೂ 1600 ಹೋಂಗಾರ್ಡ್‍ಗಳನ್ನು ನಿಯೋಜಿಸಲಾಗಿದೆ. ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ಅಪರಾಧಿಗಳು ಬಂದು ಅಪರಾಧ ಕೃತ್ಯವೆಸಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.

 ಮೈಸೂರಿನಲ್ಲಿ ಸುಮಾರು 720 ರೌಡಿ ಶೀಟರ್‍ಗಳಿದ್ದು, ಅವರ ಮೇಲೆ ನಿಗಾವಹಿಸಲಾಗಿದೆ. ಅಲ್ಲದೆ, ಅವರಿಗೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ. ವೃತ್ತಿನಿರತ ಹಳೆಯ ಪಿಕ್‍ಪಾಕೆಟರ್ಸ್, ಬ್ಯಾಗ್ ಸೂಟ್‍ಕೇಸ್, ಲಿಪ್ಟರ್ ಹಾಗೂ ಇತರೆ ಕಳುವು ಪ್ರಕರಣಗಳ ಅಪರಾಧಿಗಳ ವಿರುದ್ಧ ಭದ್ರತಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನ ನಿಷೇಧ: ದಸರಾ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಚಾಮುಂಡಿ ಬೆಟ್ಟಕ್ಕೆ ತೆರಳುವುದರಿಂದ ಸಂಚಾರ ದಟ್ಟಣೆ ಅಧಿಕವಾಗಿ ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ಸೆ.22ರಿಂದ 24ರವರೆಗೆ ಹಾಗೂ 28ರಿಂದ ಅ.2ರವರೆಗೆ ಬೆಳಗ್ಗೆ 6ರಿಂದ ರಾತ್ರಿ 9.30ರವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗಾಗಿ ಲಲಿತಮಹಲ್ ಹೆಲಿಪ್ಯಾಡ್‍ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. 21ರಿಂದ 30ರವರೆಗೆ ಅರಮನೆ ಸುತ್ತಮುತ್ತಲ ರಸ್ತೆಗಳಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಪಾರ್ಕಿಂಗ್ ನಿಷೇಧಿಸಲಾಗಿದೆ ಎಂದ ಅವರು, ಆಹಾರ ಮೇಳ ಹಾಗೂ ಯುವ ದಸರಾ ನಡೆಯುವ ಸ್ಥಳಗಳನ್ನು ವಾಹನ ರಹಿತ ಸ್ಥಳಗಳಾಗಿ ಮಾಡಲಾಗಿದೆ ಎಂದು ಹೇಳಿದರು.

66 ಸಿಸಿ ಕ್ಯಾಮರಾ ಅಳವಡಿಕೆ: ದಸರಾ ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿರುವ ಖಾಯಂ ಸಿಸಿ ಕ್ಯಾಮರಾಗಳೊಂದಿಗೆ ಹೆಚ್ಚುವರಿಯಾಗಿ ಅರಮನೆ, ಬನ್ನಿಮಂಟಪ ಮೈದಾನ, ಮೆರವಣಿಗೆ ಮಾರ್ಗ ಮತ್ತು ಇತರೆ ಆಯಕಟ್ಟಿನ ಸ್ಥಳಗಳಲ್ಲಿ 66 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ದಿನದ 24 ಗಂಟೆಯೂ ರೆಕಾರ್ಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಸಾರ್ವಜನಿಕರು ಮಾಡಬೇಕಾದ ಮತ್ತು ಮಾಡಬಾರದ ಕಾರ್ಯಗಳ ಬಗ್ಗೆ ಒಂದು ಲಕ್ಷಕ್ಕೂ ಹೆಚ್ಚು ಕರಪತ್ರಗಳನ್ನು ಹಂಚಲಾಗುವುದು ಎಂದ ಅವರು, ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ನಗರದ 30 ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಹಾಯವಾಣಿ ತೆರೆಯಲಾಗಿದೆ. ಅಹಿತಕರ ಘಟನೆ ನಡೆದಲ್ಲಿ ತಕ್ಷಣ ಪೊಲೀಸ್ ವ್ಯವಸ್ಥೆ ಸ್ಥಳಕ್ಕೆ ತೆರಳಲು ಉತ್ತಮವಾದ ಗಸ್ತು ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿಗಳಾದ ವಿಷ್ಣುವರ್ಧನ್, ವಿಕ್ರಂ ಆಮ್ಟೆ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News