ತುಮಕೂರು: ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Update: 2018-01-16 13:59 GMT

ತುಮಕೂರು,ಜ.16: ಫೆಬ್ರವರಿ 1 ಮತ್ತು 2 ರಂದು ಎರಡು ದಿನಗಳ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ನಗರದ ಗಾಜಿನಮನೆಯಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷೆ ಬಾಹ ರಮಾಕುಮಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು. ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅಂದು ಬೆಳಗ್ಗೆ ನಗರದ ಟೌನ್‍ಹಾಲ್‍ವೃತ್ತದಿಂದ ಎಂ.ಜಿ.ರಸ್ತೆ, ಹೊರಪೇಟೆ, ಕನ್ನಡ ಭವನದ ಮೂಲಕ ಗಾಜಿನಮನೆವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ನಡೆಸಲಾಗುವುದು ಹಾಗೂ ಫೆಬ್ರವರಿ 1 ರಂದು ಹೊಸದಾಗಿ ನಿರ್ಮಿಸಿರುವ ಕನ್ನಡ ಭವನದ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಿದರು.

ಕನ್ನಡ ಭವನ ಉದ್ಘಾಟನೆ ಹಾಗೂ ಸಮಾರಂಭದಲ್ಲಿ ಗ್ರಂಥಾಲಯ ನೆನೆಪಿನ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು. ಸಮ್ಮೇಳನದಲ್ಲಿ ಮೊದಲ ದಿನ ಉದ್ಘಾಟನೆ, ಗೋಷ್ಠಿಗಳು ನಡೆಲಿದ್ದು,2ನೇ ದಿನ ಸಾಹಿತಿಗಳು ಸೇರಿದಂತೆ ಮಹನೀಯರಿಗೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

ಸಮ್ಮೇಳನವನ್ನು ಯಶಸ್ವಿಗೊಳಿಸಲು ಸ್ವಾಗತ ಸಮಿತಿ, ಪ್ರಚಾರ ಸಮಿತಿ ಸೇರಿದಂತೆ ಕೆಲವು ಸಮಿತಿಗಳನ್ನು ಸಭೆಯಲ್ಲಿ ರಚಿಸಲಾಯಿತು. ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ಸೇರಿದಂತೆ ವಿವಿಧ ಮಳಿಗೆಗಳನ್ನು ಸ್ಥಾಪಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಶಾಸಕ ಡಾ.ರಫೀಕ್ ಅಹಮದ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್, ಪಾಲಿಕೆ ಆಯುಕ್ತರಾದ ಮಂಜುನಾಥ ಸೇರಿದಂತೆ ಜಿಲ್ಲಾ ಸಾಹಿತ್ಯ ಪರಿಷತ್‍ನ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News