ಮಕ್ಕಳು ಪ್ರತಿಯೊಬ್ಬರನ್ನು ಗೌರವಿಸುವ ಗುಣ-ಶಿಸ್ತನ್ನು ಬೆಳೆಸಿಕೊಳ್ಳಬೇಕು: ಬಸವರಾಜ ಹೊರಟ್ಟಿ

Update: 2018-01-20 15:17 GMT

ಧಾರವಾಡ, ಜ.20: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಗತ್ತಿನಾದ್ಯಂತ ಮನ್ನಣೆಯನ್ನು ಪಡೆದುಕೊಂಡಿದೆ. ಜೀವನದ ಮೌಲ್ಯಗಳನ್ನು ಅರಿತುಕೊಂಡು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ನಗರದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 40ನೇ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ಸೇವೆ ಸಲ್ಲಿಸುವಲ್ಲಿ ಮಕ್ಕಳು ಮುಂದಾಗಬೇಕು. ಪ್ರತಿಯೊಬ್ಬರನ್ನು ಹಾಗೂ ದೇಶವನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಶಾಲಾ ದಿನಗಳಲ್ಲಿ ನಾನು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ತೊಡಗಿಕೊಂಡಿದ್ದೆ. ಅಲ್ಲದೆ ಹಲವು ಶಿಬಿರಗಳಲ್ಲಿ ಭಾಗವಹಿಸಿದ್ದೇನೆ. ಒಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ದಿಂದ ಜೀವನಕ್ಕೆ ಬೇಕಾದ ಹಲವು ಮೌಲಿಕ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಮಾತನಾಡಿ, ಗ್ರಾಮೀಣ ಕ್ರೆಡೆಗಳಲ್ಲಿ ಮಕ್ಕಳು ತೊಡಗಿಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೊಳ್ಳಲು ಮುಂದಾಗಬೇಕಿದೆ. ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳಲು, ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆಗಳು ಉಪಯುಕ್ತವಾಗಿವೆ ಎಂದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಮಾತನಾಡಿ, ಜೀವನದ ಶಿಸ್ತು ಕಲಿಯಲು ಇಂತಹ ಶಿಬಿರಗಳು ಸಹಕಾರಿಯಾಗಿವೆ. ಸಮಾಜಮುಖಿ ಕಾರ್ಯಗಳಲ್ಲಿ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಮಕ್ಕಳ ಚಟುವಟಿಕೆಗಳಿಗೆ ಪ್ರೋತ್ಸಾಹದ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷೆ ರಜನಿ ದಾಸ್, ಲಯನ್ಸ್ ಕ್ಲಬ್ ಅಧ್ಯಕ್ಷ ಜ್ಞಾನೇಶ ನಾತು, ಜಿಲ್ಲಾ ಮುಖ್ಯ ಆಯುಕ್ತ ಎಮ್.ಎಮ್.ಲೋಂಡೆ, ಗೈಡ್ಸ್‌ನ ಜಿಲ್ಲಾ ಆಯುಕ್ತ ವಿದ್ಯಾ ನಾಡಗೀರ, ಜಿಲ್ಲಾ ಕಾರ್ಯದರ್ಶಿ ಪ್ರಭಾ ಲೋಂಡೆ ಸೇರಿದಂತೆ ವಿವಿಧ ಜಿಲ್ಲೆಗಳ ಶಿಕ್ಷಕರು, ಮಕ್ಕಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News