ಮಾರ್ಚ್ ಒಳಗಾಗಿ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಕಾಗೋಡು ತಿಮ್ಮಪ್ಪ

Update: 2018-01-22 16:38 GMT

ಶಿವಮೊಗ್ಗ, ಜ. 22 : ಗಂಗಾ ಕಲ್ಯಾಣ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳನ್ನು ಮಾರ್ಚ್ ಒಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಒಟ್ಟು 26 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಮಂಜೂರಾಗಿದ್ದು, ಇವುಗಳ ಪೈಕಿ 5 ಯೋಜನೆಗಳು ಅಂತಿಮ ಹಂತದಲ್ಲಿವೆ. ಮಲೆನಾಡಿನಲ್ಲಿ ಮಳೆಗಾಲದಲ್ಲಿ ಎಲ್ಲಾ ಕಡೆ ನೀರು ಲಭ್ಯವಾದರೂ ಬೇಸಿಗೆಯಲ್ಲಿ ಸಂಕಷ್ಟ ಎದುರಿಸುವ ಪರಿಸ್ಥಿತಿಯಿದೆ. ಆದ್ದರಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿ ತಾಲೂಕಿನಲ್ಲಿ ಕನಿಷ್ಟ ಎರಡು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಟಾನ ಕುರಿತು ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಸಚಿವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ 2233 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 1800 ಕಾಮಗಾರಿಗಳು ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ 31 ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದ್ದು, ಹಳೆಯ ಬಾಕಿ ಕಾಮಗಾರಿಗಳಿಗೆ ಪಾವತಿ ಪೂರ್ಣಗೊಳಿಸಲಾಗಿದೆ. 2018-19ನೇ ಸಾಲಿನಿಂದ ಹೊಸದಾಗಿ ಕಾಮಗಾರಿಗಳನ್ನು ಆರಂಭಿಸಬಹುದಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ತಾಲೂಕು ಮಟ್ಟದ ಕಾರ್ಯಪಡೆ ಅಡಿ ಕುಡಿಯುವ ನೀರಿನ ಯೋಜನೆಗಳಿಗೆ 80 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸದಾಗಿ ಶಿವಮೊಗ್ಗ, ಸಾಗರ ಮತ್ತು ಹೊಸನಗರ ತಾಲೂಕುಗಳಿಂದ ಪ್ರಸ್ತಾವನೆಗಳನ್ನು ಪಡೆಯಲಾಗಿದ್ದು, ಇನ್ನುಳಿದ ತಾಲೂಕುಗಳಿಂದ ಆದಷ್ಟು ಬೇಗನೆ ಪ್ರಸ್ತಾವನೆ ಪಡೆದು ಸಲ್ಲಿಸಬೇಕು. ಜಿಲ್ಲೆಯಲ್ಲಿ 61 ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿದ್ದು, 24 ಕಾಮಗಾರಿಗಳು ಪೂರ್ಣಗೊಂಡಿವೆ. ಆದಷ್ಟು ಬೇಗನೆ ಎಲ್ಲಾ ಘಟಕಗಳ ಸ್ಥಾಪನೆ ಕಾರ್ಯ ಪೂರ್ಣಗೊಳಿಸಬೇಕು. ಹಲವು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಲಭ್ಯವಿರುವುದಿಲ್ಲ ಎಂಬ ದೂರುಗಳಿದ್ದು, ಅವುಗಳನ್ನು ತಕ್ಷಣ ಸರಿಪಡಿಸಬೇಕು ಎಂದು ಸಚಿವರು ಹೇಳಿದರು.

ಮರಳಿನ ಸಮಸ್ಯೆ ಬಗೆಹರಿಸಿ: ಜಿಲ್ಲೆಯಲ್ಲಿ ಸಮರ್ಪಕವಾಗಿ ಮರಳು ದೊರೆಯದೆ ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 7 ಮರಳಿನ ಬ್ಲಾಕ್‍ಗಳಿಗೆ ಮರಳುಗಾರಿಕೆಗೆ ಅನುಮತಿ ದೊರೆತಿದ್ದು, ಒಟ್ಟು 30ಸಾವಿರ ಮೆಟ್ರಿಕ್ ಟನ್ ಮರಳು ಇದುವರೆಗೆ ತೆಗೆಯಲಾಗಿದೆ. ಆದರೆ ಅರ್ಜಿದಾರರೊಬ್ಬರು ನ್ಯಾಯಾಲಯದಲ್ಲಿ ದಾವೆ ಹೂಡಿರುವುದರಿಂದ ತೊಂದರೆಯುಂಟಾಗಿದ್ದು, ನ್ಯಾಯಾಲಯ ತೀರ್ಪಿನಂತೆ ಕ್ರಮ ಕೈಗೊಂಡು ಮರಳು ಸುಲಭವಾಗಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರ ನೀರು ಸರಬರಾಜು: ಶಿವಮೊಗ್ಗ ನಗರದಲ್ಲಿ ಅಮೃತ್ ಯೋಜನೆಯಡಿ 11 ಕುಡಿಯುವ ನೀರಿನ ಟ್ಯಾಂಕ್‍ಗಳ ಪೈಕಿ 8ಕಾಮಗಾರಿ ಪ್ರಗತಿಯಲ್ಲಿವೆ. ಯುಜಿಡಿ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದ್ದು, 76ಸಾವಿರ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. 3 ಪ್ರದೇಶಗಳಲ್ಲಿ ಈಗಾಗಲೆ ಕಾಮಗಾರಿಗಳು ಪೂರ್ಣಗೊಂಡಿದ್ದು, ಸಂಪರ್ಕ ಕಲ್ಪಿಸುವ ಹಂತದಲ್ಲಿದೆ. ಪರಿಷ್ಕೃತ ಅಂದಾಜುಪಟ್ಟಿಗೆ ಸರ್ಕಾರದ ಅನುಮೋದನೆ ದೊರೆತಿದ್ದು, ಕಾಮಗಾರಿಯನ್ನು ತ್ವರಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಕೆಲವು ಕಡೆಗಳಲ್ಲಿ ಯುಜಿಡಿ ನಿರ್ಮಾಣಕ್ಕಾಗಿ ಹೊಸದಾಗಿ ನಿರ್ಮಿಸಿರುವ ರಸ್ತೆಗಳನ್ನು ಅಗೆಯಲಾಗುತ್ತಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಸಮನ್ವಯ ಸಾಧಿಸುವಂತೆ ಸಚಿವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಭಾನುಪ್ರಕಾಶ್, ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News