ಮದ್ದೂರು: ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆ

Update: 2018-01-28 16:50 GMT

ಮದ್ದೂರು, ಜ.28: ಸಮೀಪದ ಸೋಮನಹಳ್ಳಿಯಲ್ಲಿ ರವಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸುಮಾರು 300 ಯುವಕರು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು.

ಕೆಪಿಸಿಸಿ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಮಧು ಜಿ.ಮಾದೇಗೌಡ ಹಾಗೂ ಜಿಲ್ಲಾಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ಗೌತಂ ಅವರ ನೇತೃತ್ವದಲ್ಲಿ ಯುವಜನರನ್ನು ಪಕ್ಷಕ್ಕೆ ಸ್ವಾಗತಿಸಲಾಯಿತು.

ನಂತರ ಮಾತನಾಡಿದ ಮಧು ಜಿ.ಮಾದೇಗೌಡ, ತಾಲೂಕಿನಲ್ಲಿ ಯುವ ಜನರು ಕಾಂಗ್ರೆಸ್ ಪಕ್ಷದ ತತ್ವಸಿದ್ದಾಂತಗಳನ್ನು ಮೆಚ್ಚಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳುತ್ತಿರುವುದು ಪಕ್ಷದ ಸಂಘಟನೆಗೆ ಅನುಕೂಲವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ. ತಾಲೂಕು ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಂದಾಗಿದ್ದೇವೆ. ಯಾರಿಗೆ ಟಿಕೆಟ್ ನೀಡಿದರೂ ಹಗಲಿರುಳು ಪ್ರಾಮಾಣಿಕವಾಗಿ ದುಡಿದು ಗೆಲ್ಲಿಸಲಿದ್ದೇವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದು, ಇದನ್ನು ಮೆಚ್ಚಿ ಜನರು ಮತ್ತೊಮ್ಮೆ ಕಾಂಗ್ರೆಸ್‍ ಅನ್ನು ಅಧಿಕಾರಕ್ಕೆ ತರಲಿದ್ದಾರೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್‍ಕುಮಾರ್, ತಾಪಂ ಮಾಜಿ ಸದಸ್ಯ ಕೆ.ಸಿ.ಪ್ರಕಾಶ್, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ತಾಲೂಕು ಅಧ್ಯಕ್ಷ ಮುನ್ವರ್ ಪಾಷ, ಮುಖಂಡರಾದ ಶಶಿಕಾಂತ್, ರಾಜೇಶ್, ಶೇಖರ್, ಗಿರೀಶ್, ಕುಮಾರ್ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News