ಕಾಸ್‌ಗಂಜ್ ಕೋಮುಗಲಭೆ: ಆದಿತ್ಯನಾಥ್ ಸರ್ಕಾರದ ವಿರುದ್ಧ ವಿಪಕ್ಷ ಕಿಡಿ

Update: 2018-01-29 03:52 GMT

ಲಕ್ನೋ, ಜ.29: ಎರಡು ದಿನಗಳ ಹಿಂದೆ ಕೋಮುದಳ್ಳುರಿಗೆ ಒಬ್ಬ ಸಿಲುಕಿದ ಕಾಸ್‌ಗಂಜ್‌ನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ.

ಘಟನೆ ಸಂಬಂಧ 112 ಮಂದಿಯನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ಮೇಲೆ ನಿಗಾ ಇಡಲು ಸಲುವಾಗಿ ಮೂರು ಡ್ರೋನ್ ಕ್ಯಾಮೆರಾಗಳ ವೈಮಾನಿಕ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ. ಮನೆಮನೆ ಶೋಧದಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೆ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಯುಪಿ ಸರ್ಕಾರ ಘೋಷಿಸಿದೆ. ಘಟನೆ ಸಂಬಂಧ ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಭಾರತೀಯ ದಂಡಸಂಹಿತೆ, ಅಪರಾಧ ಕಾನೂನು ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರಧ್ವಜ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.

"ಇಡೀ ದೇಶದಲ್ಲಿ ಅದರಲ್ಲೂ ಮುಖ್ಯವಾಗಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಸಾರ್ವಜನಿಕ ಕಲ್ಯಾಣ ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಕಾನೂನು ಹಾಗೂ ಸುವ್ಯವಸ್ಥೇ ಪರಿಸ್ಥಿತಿ ಹದಗೆಟ್ಟಿದೆ. ಉತ್ತರ ಪ್ರದೇಶದಲ್ಲಿ ಸಂವಿಧಾನಾತ್ಮಕ ಆಡಳಿತದ ಬದಲು ಜಂಗಲ್‌ರಾಜ್ ವಿಜೃಂಭಿಸುತ್ತಿದೆ" ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಟೀಕಿಸಿದ್ದಾರೆ.

ಸಮಾಜವಾದಿ ಪಕ್ಷದ ವಕ್ತಾರ ಸುನೀಲ್ ಸಿಂಗ್ ಸಾಜನ್, "ಕಾಸ್‌ಗಂಜ್ ಹಿಂಸಾಚಾರಕ್ಕೆ ಸರ್ಕಾರವೇ ಕುಮ್ಮಕ್ಕು ನೀಡಿದೆ. ಮುಖ್ಯಮಂತ್ರಿ ರಾಜೀನಾಮೆ ನಮಗೆ ಬೇಕಾಗಿಲ್ಲ. ಶಾಂತಿ ನೆಲೆಸಿದರೆ ಸಾಕು" ಎಂದು ಅವರು ಹೇಳಿದ್ದಾರೆ. ಕಳೆದ ಮೂರು ದಿನಗಳಿಂದ ಆರೆಸ್ಸೆಸ್, ವಿಶ್ವಹಿಂದೂ ಪರಿಷತ್ ಮತ್ತು ಎಬಿವಿಪಿ ಕಾರ್ಯಕರ್ತರು ಭೀತಿಯ ವಾತಾವರಣ ಮೂಡಿಸಿದ್ದಾರೆ. ಸರ್ಕಾರ ಸುಮ್ಮನೆ ಕುಳಿತಿದ್ದರೆ, ಪೊಲೀಸರು ಅಸಹಾಯಕರಾಗಿದ್ದಾರೆ ಎಂದು ಅವರು ಆಕ್ಷೇಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News