ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳದಿದ್ದರೆ ಕಠಿಣ ಕ್ರಮ: ಜಗದೀಶ ಹಿರೇಮನಿ

Update: 2018-03-26 15:29 GMT

ಧಾರವಾಡ, ಮಾ.24: ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ 2014ರ ಮೊದಲು ಜಾಡಮಾಲಿ (ಸ್ಕ್ಯಾವೆಂಜರ್) ಮತ್ತು ಈಗಲೂ ಸಫಾಯಿ ಕರ್ಮಚಾರಿ ಗಳಾಗಿ ಕಾರ್ಯನಿರ್ವಹಿಸುತ್ತಿರುವವರ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಅವರಿಗೆ ಕೇಂದ್ರ ಸರಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಾಗಿ ದುಡಿಯುತ್ತಿರುವ ವ್ಯಕ್ತಿ ಹಾಗೂ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ ಸರಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ಕನಿಷ್ಠ ವೇತನ ಅಳವಡಿಕೆ, ಆರೋಗ್ಯ ತಪಾಸಣೆ, ವಾಸಕ್ಕೆ ಸ್ವಂತ ಮನೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವುದಕ್ಕಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆದರೆ ಅಧಿಕಾರಿಗಳು ಸರಿಯಾಗಿ ತಿಳಿಯದೇ ಮತ್ತು ಅದನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ ವಹಿಸುತ್ತಿರುವುದು ಎದ್ದು ಕಾಣುತ್ತಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಜರುಗಿಸಿಒಂದು ವಾರದೊಳಗಾಗಿ ಜಾಡಮಾಲಿ ಮತ್ತು ಸಫಾಯಿ ಕರ್ಮಚಾರಿಗಳ ಕುರಿತು ಮರು ಸಮೀಕ್ಷೆ ಮಾಡಲು ಕ್ರಮಕೈಗೊಳ್ಳಬೇಕು. ಇದಕ್ಕಾಗಿ ಒಂದು ಸಮಿತಿ ರಚಿಸಿ ಅದರಲ್ಲಿ ಅಧಿಕಾರಿಗಳು ಮತ್ತು ಆ ಸಮುದಾಯದ ಪ್ರತಿನಿಧಿಗಳು ಭಾಗವಹಿಸಿ ಪೂರ್ಣ ಪ್ರಮಾಣದ ಮಾಹಿತಿ ಸಂಗ್ರಹಿಸಬೇಕು ಎಂದು ಜಗದೀಶ ಹಿರೇಮನಿ ತಿಳಿಸಿದರು.

ಮರು ಸಮೀಕ್ಷೆಯಲ್ಲಿ ಗುರುತಿಸಿದ ವ್ಯಕ್ತಿ ಮತ್ತು ಕುಟುಂಬಗಳಿಗೆ ಗುರುತಿನ ಪತ್ರ ನೀಡಬೇಕು. ಗುರುತಿನ ಪತ್ರ ನೀಡುವ ಅಧಿಕಾರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಆಯೋಗದ ಅಧಿಸೂಚನೆ ಅವಕಾಶ ಕಲ್ಪಿಸಿದೆ ಎಂದು ಅವರು ಹೇಳಿದರು.

ಅಧಿಕಾರಿಗಳು ಸಫಾಯಿ ಕರ್ಮಚಾರಿಗಳ ಭವಿಷ್ಯ ನಿಧಿ, ನಿಗದಿತ ವೇತನ ಮತ್ತು ಇಎಸ್‌ಐ ಸೌಲಭ್ಯಗಳು ನಿರಂತರವಾಗಿ ಸಿಗುವಂತೆ ಮುತುವರ್ಜಿವಹಿಸಬೇಕು. 2020ರೊಳಗೆ ರಾಷ್ಟ್ರದಲ್ಲಿ ಈ ಸಮಸ್ಯೆ ಇರದಂತೆ ಮತ್ತು ವಸತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಸೌಲಭ್ಯಗಳು ಸಫಾಯಿ ಕರ್ಮಚಾರಿಗಳಿಗೆ ದೊರಕಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ಸ್ನೇಹಲ್, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ನಗರ ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್.ರುದ್ರಪ್ಪ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಮೇಶ ಕೋನರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ಎಂ.ದೊಡ್ಡಮನಿ, ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News