ಕರ್ನಾಟಕ ರಾಜ್ಯ ಭ್ರಷ್ಟಾಚಾರದ ಎಟಿಎಂ ಇದ್ದಂತೆ: ಅಮಿತ್ ಶಾ

Update: 2018-04-12 15:00 GMT

ಧಾರವಾಡ, ಎ. 12: ಜಾತಿ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ಸಮಾಜವನ್ನು, ಜಾತಿ-ಧರ್ಮಗಳ ಹೆಸರಿನಲ್ಲಿ ಒಡೆಯುವ ಕೆಲಸ ಮಾಡುತ್ತಿದ್ದು, ದೇಶದ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದು, ತಕ್ಕ ಉತ್ತರ ನೀಡಲಿದ್ದಾರೆಂದು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಎಚ್ಚರಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನ ಪ್ರಜಾಪ್ರಭುತ್ವ ವಿರೋಧಿ ನಿಲುವು ವಿರೋಧಿಸಿ ಬಿಜೆಪಿ ಏರ್ಪಡಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಜಾಪ್ರಭುತ್ವ ದೇವಸ್ಥಾನವಿದ್ದಂತೆ. ಆದರೆ, ಕಾಂಗ್ರೆಸ್ಸಿಗೆ ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆಯೇ ಇಲ್ಲ ಎಂದು ಟೀಕಿಸಿದರು.

ಜನತಾ ನ್ಯಾಯಾಲಯಕ್ಕೆ ಬಂದಿದ್ದೇವೆ. ಕರ್ನಾಟಕ ರಾಜ್ಯ ಭ್ರಷ್ಟಾಚಾರ ಮಾಡಲು ಎಟಿಎಂ ಇದ್ದಂತೆ ಇದೆ. ಹೀಗಾಗಿ ಈ ಎಟಿಎಂ ಉಳಿಸಿಕೊಳ್ಳಲು ರಾಹುಲ್ ಗಾಂಧಿ ರಾಜ್ಯದಲ್ಲಿ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಬಿಜೆಪಿ ಅಧಿಕಾರಕ್ಕೆ ತನ್ನಿ ಎಂದು ಅಮಿತ್ ಶಾ ಮನವಿ ಮಾಡಿದರು.

ಕಲಾಪ ವ್ಯರ್ಥಕ್ಕೆ ರಾಹುಲ್ ಕಾರಣ: ಸಂಸತ್ ಅಧಿವೇಶನದ 22 ದಿನದ ಕಲಾಪಕ್ಕೆ ಅಡ್ಡಿಪಡಿಸಿದ ರಾಹುಲ್ ಗಾಂಧಿ ನಿಲುವಿನಿಂದ 200 ಕೋಟಿ ರೂ.ಗಳಿಗೂ ಅಧಿಕ ಹಣ ವ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ವಿಪಕ್ಷವೊಂದು ಚರ್ಚೆಯಿಂದ ಕಾಲ್ಕಿತ್ತಿದೆ ಎಂದು ವಾಗ್ದಾಳಿ ನಡೆಸಿದರು.

2014ರಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ದೇಶದಲ್ಲಿ ಅಧಿಕಾರಕ್ಕೆ ಬಂತು. ದೇಶದ ಎಲ್ಲ ರಾಜ್ಯಗಳ ನಡುವೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಅಮಿತ್ ಶಾ ಭವಿಷ್ಯ ನುಡಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಸದ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಪ್ಪುಬಾವುಟ ಪ್ರದರ್ಶನ
‘ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾಗೆ ಕಪ್ಪು ಬಾವುಟ ಪ್ರದರ್ಶಿಸಲು ಆಗಮಿಸಿದ್ದ ಸಮತಾ ಸೇನೆಯ ಆರು ಮಂದಿ ಕಾರ್ಯಕರ್ತರನ್ನು ಧಾರವಾಡದದ ಜಿಲ್ಲಾಧಿಕಾರಿ ಕಚೇರಿ ಎದುರು ಪೊಲೀಸರು ಬಂಧಿಸಿದ್ದಾರೆ. ಕೋಮುವಾದಿ ಅಮಿತ್ ಶಾಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News