ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ :ಅರ್ಜಿಗಳ ವಿಚಾರಣೆ ನ್ಯಾ.ಆರ್.ಬಿ.ಬೂದಿಹಾಳ್ ಪೀಠಕ್ಕೆ ವರ್ಗಾವಣೆ

Update: 2018-04-12 15:57 GMT

ಬೆಂಗಳೂರು, ಎ.12: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಆರೋಪ ಮುಕ್ತಗೊಳಿಸಿ ಸೆಷನ್ಸ್ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರ ಪೀಠಕ್ಕೆ ವರ್ಗಾಯಿಸಲಾಗಿದೆ.

ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಹಾಗೂ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಗಳು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ನ್ಯಾಯಪೀಠ, ಪ್ರಕರಣದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ್ ಅವರ ಪೀಠಕ್ಕೆ ವರ್ಗಾಯಿಸಿ ಈಗಾಗಲೇ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. ಹೀಗಾಗಿ ಅಲ್ಲಿಯೇ ವಿಚಾರಣೆ ನಡೆಸುವುದು ಸೂಕ್ತವೆಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಗಳನ್ನು ವರ್ಗಾಯಿಸಿತು.

ರಾಘವೇಶ್ವರ ಶ್ರೀಗಳ ವಿರುದ್ಧ ರಾಮಕಥಾ ಗಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್, 2016ರ ಮಾ.31ರಂದು, ಶ್ರೀಗಳ ವಿರುದ್ಧದ ದೋಷಾರೋಪ ಪಟ್ಟಿಯಲ್ಲಿನ ಆರೋಪಗಳನ್ನು ಕೈಬಿಟ್ಟು ಆದೇಶಿಸಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಪ್ರಾಸಿಕ್ಯೂಷನ್ ಹಾಗೂ ಸಂತ್ರಸ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News