ಪೋಸ್ಟ್ ಕಾರ್ಡ್ ನ್ಯೂಸ್ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ಎಫ್‌ಐಆರ್

Update: 2018-11-30 13:47 GMT

ಬೆಂಗಳೂರು, ನ.30: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಸುಳ್ಳು ಸುದ್ದಿ ಹರಡುವ ಪೋಸ್ಟ್ ಕಾರ್ಡ್ ವೈಬ್‌ಸೈಟ್‌ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ

ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಸುದ್ದಿಗಳನ್ನು ಹಬ್ಬಿಸಿ, ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಶುಕ್ರವಾರ ನಗರದ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ಎ.ಎನ್.ನಟರಾಜ್ ಗೌಡ ಅವರು ದೂರು ನೀಡಿದ್ದಾರೆ. ಈ ಸಂಬಂಧ ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎ.ಎನ್.ನಟರಾಜ್ ಗೌಡ, ಅತ್ಯಂತ  ಕೀಳುಮಟ್ಟದ ಭಾಷೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪೋಸ್ಟ್ ಹಾಕುವ ಕಿಡಿಗೇಡಿ ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ದೂರು ನೀಡಿದ್ದು, ಪೊಲೀಸರು ಆತನನ್ನು ಬಂಧಿಸಿ, ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.

ಸದಾ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದಲ್ಲೇ ಕುಖ್ಯಾತಿ ಗಳಿಸಿರುವ ಮಹೇಶ್ ವಿಕ್ರಂ ಹೆಗಡೆ ಒಮ್ಮೆ ಬಂಧಿತನಾಗಿದ್ದು, ಈತನ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, ಕೋಮುಗಲಭೆಗಳಿಗೆ ಈತ ಪ್ರಚೋದನೆ ನೀಡುವ ರೀತಿಯಲ್ಲಿ ನಡೆದುಕೊಳ್ಳುತ್ತಾನೆ ಎನ್ನುವ ಆರೋಪ ಇದೆ. ಹೀಗಾಗಿ, ಈತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಉಪಸ್ಥಿತರಿದ್ದರು.

ಪೊಲೀಸರ ಹುಡುಕಾಟ
ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ್ದ ಆರೋದಪಡಿ ಕಿಡಿಗೇಡಿ ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 
-ಎ.ಎನ್.ನಟರಾಜ್‌ಗೌಡ, ಕೆಪಿಸಿಸಿ ಕಾರ್ಯದರ್ಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News