ಜನವರಿ 2ರಿಂದ ಖಾದಿ-ಗ್ರಾಮೋದ್ಯೋಗ ವಸ್ತು ಪ್ರದರ್ಶನ: ಸಚಿವ ಶ್ರೀನಿವಾಸ್

Update: 2018-12-29 16:07 GMT

ಬೆಂಗಳೂರು, ಡಿ. 29: ಗುಡಿ ಕೈಗಾರಿಕೆ ಮತ್ತು ಖಾದಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ 2019ರ ಜನವರಿ 2ರಿಂದ 31ರ ವರೆಗೆ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ರಾಷ್ಟ್ರಮಟ್ಟದ ಖಾದಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಖಾದಿ ಉತ್ಸವಕ್ಕೆ ಚಾಲನೆ ನೀಡಲಿದ್ದು, ಕರಕುಶಲ ಕರ್ಮಿಗಳು, ಗುಡಿ ಕೈಗಾರಿಕೋದ್ಯಮಿಗಳು ಹಾಗೂ ಖಾದಿ ಉತ್ಪನ್ನ ತಯಾರಕರು ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಏರ್ಪಡಿಸಿರುವ ಈ ಉತ್ಸವಕ್ಕೆ ಸುಮಾರು 1.50 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡುವ ನಿರೀಕ್ಷೆ ಇದ್ದು, 50 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಉತ್ಪನ್ನಗಳು ಪ್ರದರ್ಶನ ಮತ್ತು ಮಾರಾಟ ಲಭ್ಯವಿರಲಿವೆ ಎಂದು ಹೇಳಿದರು.

ಉತ್ಸವದಲ್ಲಿ ಒಟ್ಟು 225 ಮಳಿಗೆಗಳನ್ನು ಸ್ಥಾಪಿಸಲಿದ್ದು, ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ. ಜತೆಗೆ ಹೊರ ರಾಜ್ಯಗಳ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದ ಅವರು, ಉತ್ಸವದಲ್ಲಿ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ ಮನರಂಜನೆ ಕಾರ್ಯಕ್ರಮಗಳನ್ನು ಸಂಜೆ ಏಪರ್ಡಿಸಲಾಗುವುದು ಎಂದರು.

ಪ್ರಾತ್ಯಕ್ಷತೆಯನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ನಾಡೋಜ ಪಾಟೀಲ್ ಪುಟ್ಟಪ್ಪ, ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

‘ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮರಳು ನೀತಿ ಜಾರಿಗೆ ತನ್ನಿ ಎಂದು ಬೊಬ್ಬೆ ಹಾಕುತ್ತಿದ್ದಾರೆ. ಆದರೆ, ರಾಜ್ಯ ಸರಕಾರ ಈಗಾಗಲೇ ಕಾನೂನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ’

-ಎಸ್.ಆರ್.ಶ್ರೀನಿವಾಸ್, ದಾವಣಗೆರೆ ಉಸ್ತುವಾರಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News